
IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ.

2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು.

ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು 9.2 ಕೋಟಿ ರೂ. ನೀಡುವ ಮೂಲಕ ಮುಸ್ತಫಿಝುರ್ ರೆಹಮಾನ್ ಅವರನ್ನು ಖರೀದಿಸಿದ್ದರು. ಇದೀಗ ಕೋಟಿ ಮೊತ್ತ ನೀಡಿ ಖರೀದಿಸಿದ ಬಾಂಗ್ಲಾದೇಶ್ ಆಟಗಾರನನ್ನು ತಂಡದಿಂದ ಕೈ ಬಿಡುವಂತೆ ಬಿಸಿಸಿಐ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದೆ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ರಾಜತಾಂತ್ರಿಕ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ತಿಳಿಸಲಾಗಿದೆ. ಹೀಗಾಗಿ ಮುಂಬರುವ ಐಪಿಎಲ್ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಇತ್ತ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟು ಬದಲಿ ಆಟಗಾರನನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಹರಾಜಿನಲ್ಲಿ ಮಾರಾಟವಾಗದೇ ಉಳಿದಿರುವ ಯಾವುದಾದರೂ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಅವಕಾಶವನ್ನು ಪಡೆಯಲಿದ್ದಾರೆ.