- Kannada News Photo gallery Cricket photos IPL 2026: MCA stadium in Gahunje is in line to be RCB's second home
IPL 2026: ಚಿನ್ನಸ್ವಾಮಿ ಸ್ಟೇಡಿಯಂ ನಿಷೇಧ: RCB ಕಣಕ್ಕಿಳಿಯುವುದು ಎಲ್ಲಿ?
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡವು ಮುಂದಿನ ಸೀಸನ್ನಲ್ಲಿ ಹೊಸ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ 2ನೇ ತವರು ಮೈದಾನವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ.
Updated on:Nov 12, 2025 | 2:33 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಅನುಮಾನ. ಹೀಗಾಗಿಯೇ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದೆಲ್ಲಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಎಂಸಿಎ. ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ನ (ಎಂಸಿಎ) ಅಧೀನದಲ್ಲಿರುವ ಪುಣೆಯ MCA ಸ್ಟೇಡಿಯಂನಲ್ಲಿ ಆರ್ಸಿಬಿ ತನ್ನ ಪಂದ್ಯಗಳನ್ನು ಆಯೋಜಿಸಲು ಮಾತುಕತೆ ನಡೆಸಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಆರ್ಸಿಬಿ ಪುಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

ಆರ್ಸಿಬಿ ತಂಡಕ್ಕೆ ತವರಿನಲ್ಲಿ ಪಂದ್ಯ ಆಯೋಜಿಸಲು ಸಮಸ್ಯೆಗಳಿವೆ. ಹೀಗಾಗಿ ಅವರು ಪರ್ಯಾಯ ಸ್ಥಳಗಳನ್ನು ಹುಡುಕುತ್ತಿದ್ದಾರೆ. ಈ ಬಗ್ಗೆ ನಮ್ಮೊಂದಿಗೆ ಚರ್ಚಿಸಿದ್ದಾರೆ. ಐಪಿಎಲ್ ವೇಳೆ ನಮ್ಮ ಕ್ರೀಡಾಂಗಣ ಫ್ರೀ ಇರುವುದರಿಂದ ಇಲ್ಲಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಎಂಸಿಎ ಕಾರ್ಯದರ್ಶಿ ಕಮಲೇಶ್ ಪಿಸಾಲ್ ತಿಳಿಸಿದ್ದಾರೆ.

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿಲ್ಲ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳಿಗೂ ಎನ್ಒಸಿ ಸಿಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪುಣೆಯ ಸ್ಟೇಡಿಯಂ ಅನ್ನು ತನ್ನ 2ನೇ ತವರು ಮೈದಾನವಾಗಿ ಆಯ್ಕೆ ಮಾಡಲು ಮುಂದಾಗಿದೆ.
Published On - 2:09 pm, Wed, 12 November 25
