
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ೨೦ ಸರಣಿ ಇಂದಿನಿಂದ (ಜ.21) ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಪರ ಕಣಕ್ಕಿಳಿಯುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಕೊನೆಯ ಟಿ೨೦ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ.

ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅದರಲ್ಲೂ ಎಡಗೈ ದಾಂಡಿಗ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಉತ್ತರ ನೀಡಿದ್ದಾರೆ.

ನಾಗ್ಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಬದಲಿಗೆ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ. ಇಶಾನ್ ಟಿ೨೦ ವಿಶ್ವಕಪ್ ತಂಡದಲ್ಲಿರುವ ಆಟಗಾರ. ಹೀಗಾಗಿ ಅವರನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು 4ನೇ ಕ್ರಮಾಂಕದಲ್ಲಿ ನಾನು (ಸೂರ್ಯಕುಮಾರ್ ಯಾದವ್) ಕಣಕ್ಕಿಳಿಲಿದ್ದೇನೆ ಎಂದಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವುದು ಡೌಟ್. ಏಕೆಂದರೆ ಐದನೇ ಮತ್ತು ಆರನೇ ಕ್ರಮಾಂಕಗಳಲ್ಲಿ ಆಲ್ ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಬೆಂಚ್ ಕಾಯಬೇಕಾಗಿ ಬರಬಹುದು.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.