WTC Final 2023: ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಬದಲಿ ಆಟಗಾರ ಆಯ್ಕೆ
India Squad For WTC Final: ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ.
Updated on: May 08, 2023 | 5:40 PM

WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕೂಡ ಸ್ಥಾನ ಪಡೆದಿದ್ದರು. ಆದರೆ ಆರ್ಸಿಬಿ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಅಲ್ಲದೆ ಗಾಯವು ಗಂಭೀರವಾಗಿದ್ದ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಇತ್ತ ಕೆಎಲ್ ರಾಹುಲ್ ಗಾಯಗೊಂಡ ಪರಿಣಾಮ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ಗಾಗಿ ಆಯ್ಕೆ ಮಾಡಲಾದ ಭಾರತ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಅವರ ಬದಲಿ ಆಟಗಾರನನ್ನು ಬಿಸಿಸಿಐ ಹೆಸರಿಸಿದೆ.

ಕೆಎಲ್ ರಾಹುಲ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೂ ಆಯ್ಕೆಯಾಗಿದ್ದ ಕಿಶನ್ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಇದೀಗ ಅಚ್ಚರಿ ಎಂಬಂತೆ ಯುವ ಎಡಗೈ ದಾಂಡಿಗನನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಕಿಶನ್ ಟೀಮ್ ಇಂಡಿಯಾದ 2ನೇ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಂಡದ ಪ್ರಮುಖ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ.

ಹಾಗೆಯೇ ಮೀಸಲು ಆಟಗಾರರಾಗಿ ರುತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ಶುರುವಾಗಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).



















