- Kannada News Photo gallery Cricket photos Jasprit Bumrah Creates Record in Australia in Test Cricket
ಆಸ್ಟ್ರೇಲಿಯಾ ಪಿಚ್ನಲ್ಲಿ ಇತಿಹಾಸ ನಿರ್ಮಿಸಿದ ಜಸ್ಪ್ರೀತ್ ಬುಮ್ರಾ
Australia vs India, 3rd Test: ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಒಟ್ಟು 9 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಪಡೆದಿದ್ದ ಬುಮ್ರಾ ದ್ವಿತೀಯ ಇನಿಂಗ್ಸ್ನಲ್ಲಿ 3 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ ವೇಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Updated on: Dec 18, 2024 | 10:20 AM

ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕಪಿಲ್ ದೇವ್ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿದು ಬುಮ್ರಾ ಆಸ್ಟ್ರೇಲಿಯಾ ಪಿಚ್ನಲ್ಲಿನ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

ಗಾಬಾ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 3* ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಟೆಸ್ಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾದ ಮಾಜಿ ನಾಯಕ 11 ಪಂದ್ಯಗಳಿಂದ ಒಟ್ಟು 51 ವಿಕೆಟ್ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಈ ಮೈಲುಗಲ್ಲನ್ನು ದಾಟುವಲ್ಲಿ ಬುಮ್ರಾ ಯಶಸ್ವಿಯಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾದಲ್ಲಿ ಈವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 53 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಆಸ್ಟ್ರೇಲಿಯಾ ಪಿಚ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿದ್ದಾರೆ.

ಇದಕ್ಕೂ ಮುನ್ನ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿ ವಿದೇಶಿ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದರು. ಈ ದಾಖಲೆ ಕೂಡ ಭಾರತದ ಮಾಜಿ ನಾಯಕ ಕಪಿಲ್ ದೇವ್ (10 ಬಾರಿ) ಹೆಸರಿನಲ್ಲಿತ್ತು. ಇದೀಗ 11ನೇ ಬಾರಿ 5 ವಿಕೆಟ್ ಕಬಳಿಸಿ ಬುಮ್ರಾ ಈ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.
