
ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದ್ದು, ಮತ್ತಿಬ್ಬರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಟೀಮ್ ಇಂಡಿಯಾ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

ಅದರಂತೆ ಭಾರತ ತಂಡದಿಂದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಅವರ ಬದಲಿಯಾಗಿ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಇನ್ನು ಈ ಮೊದಲು ಪ್ರಕಟಿಸಿದ 15 ಸದಸ್ಯರ ತಂಡದಲ್ಲಿ ಹೆಚ್ಚುವರಿ ಆರಂಭಿಕನಾಗಿ ಸ್ಥಾನ ಪಡೆದಿದ್ದ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಈ ಮೂಲಕ ಟೀಮ್ ಇಂಡಿಯಾ ಕೊನೆ ಕ್ಷಣದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದ್ದು, ಇದೀಗ ಅಂತಿಮ ಪಟ್ಟಿಯನ್ನು ಐಸಿಸಿಗೆ ಸಲ್ಲಿಸಿದೆ. ಇನ್ಮುಂದೆ ಗಾಯದ ಸಮಸ್ಯೆ ಅಥವಾ ಇನ್ನಿತರ ಕಾರಣಗಳಿಗಾಗಿ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದರೆ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕು. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆಯಾದ ಭಾರತ ತಂಡ ಈ ಕೆಳಗಿನಂತಿದೆ...

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
Published On - 8:23 am, Wed, 12 February 25