- Kannada News Photo gallery Cricket photos Jasprit Bumrah ruled out of the entire Test series against Australia Cricket News in Kannada
Jasprit Bumrah: ಮೊದಲ ಟೆಸ್ಟ್ ನಡುವೆ ಟೀಮ್ ಇಂಡಿಯಾಕ್ಕೆ ದೊಡ್ಡ ಶಾಕ್: ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್
India vs Australia Test: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವಾಗಿದೆ. ಸ್ಟಾರ್ ವೇಗಿ ಆಸೀಸ್ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.
Updated on:Feb 10, 2023 | 11:07 AM

ಭಾರತ ಕ್ರಿಕೆಟ್ ತಂಡ ಸದ್ಯ ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯ ಆಡುತ್ತಿದೆ. ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿದ ಕಾಂಗರೂ ಪಡೆ ಕೇವಲ 177 ರನ್ಗೆ ಆಲೌಟ್ ಆಯಿತು. ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ.

ಬ್ಯಾಟಿಂಗ್ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವಾಗಿದೆ. ಮೂರನೇ ಟೆಸ್ಟ್ ಪಂದ್ಯದ ವೇಳೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗಿದ್ದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ಆಸೀಸ್ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

ಫಿಟ್ನೆಸ್ ವಿಚಾರದಲ್ಲಿ ಯಾವುದೇ ಅಪಾಯ ತೆಗೆದುಕೊಳ್ಳುವುದು ಬೇಡ ಎಂಬ ಉದ್ದೇಶದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬುಮ್ರಾ ಅವರನ್ನು ಆಯ್ಕೆ ಮಾಡುತ್ತಿಲ್ಲ ಎಂದು ವರದಿ ಆಗಿದೆ.

ಜಸ್ಪ್ರೀತ್ ಬುಮ್ರಾ ಕೊನೆಯದಾಗಿ ಕಳೆದ ವರ್ಷ ನಡೆದ ಏಷ್ಯಾಕಪ್ನಲ್ಲಿ ಕಣಕ್ಕಿಳಿದಿದ್ದರು. ಆರು ತಿಂಗಳುಗಳಿಂದ ಕ್ರಿಕೆಟ್ನಿಂದ ದೂರವಿರುವ ಬುಮ್ರಾ ಸದ್ಯ ಬೆಂಗಳೂರಿನ ಎನ್ಸಿಎನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಬುಮ್ರಾ ಟಿ20 ವಿಶ್ವಕಪ್ ತಪ್ಪಿಸಿಕೊಂಡಿದ್ದರು. ಇದಾದ ಬಳಿಕ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಜನವರಿಯಲ್ಲಿ ಸಂಪೂರ್ಣ ಫಿಟ್ ಆಗಿದ್ದ ಕಾರಣ ಅವರನ್ನು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಯಿತು. ಆದರೆ, ಪುನಃ ಬೆನ್ನು ನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆಗೆ ಕಳುಹಿಸಲಾಯಿತು.

ಸದ್ಯ ಬುಮ್ರಾ ಸಂಪೂರ್ಣ ಫಿಟ್ ಇಲ್ಲದ ಕಾರಣ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಮೂಲಗಳ ಪ್ರಕಾರ ಜಸ್ಪ್ರೀತ್ ಇದೇ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ಗೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ. ಎರಡು ವಿಕೆಟ್ ಕಳೆದುಕೊಂಡಿದ್ದರೂ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಚೇತೇಶ್ವರ್ ಪೂಜಾರ ಇವರಿಗೆ ಸಾಥ್ ನೀಡುತ್ತಿದ್ದಾರೆ.
Published On - 11:07 am, Fri, 10 February 23




