
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ನಡುವೆ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಯಿತು. ಕೆಲಸದ ಹೊರೆ ನಿರ್ವಹಣೆ ಕಾರಣ ನೀಡಿ ತಂಡದ ಆಡಳಿತ ಮಂಡಳಿ ಬುಮ್ರಾರನ್ನು ತಂಡದಿಂದ ಬಿಡುಗಡೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದೀಗ ಬುಮ್ರಾ ಬಗ್ಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಅವರು ಮುಂಬರುವ ಏಷ್ಯಾಕಪ್‌ನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಡುವೆಯೇ ಜಸ್ಪ್ರೀತ್ ಬುಮ್ರಾ ಬಗ್ಗೆ ದೊಡ್ಡ ಮಾಹಿತಿ ಬೊರಬಿದ್ದಿದ್ದು, ವರದಿಯ ಪ್ರಕಾರ, ಜಸ್ಪ್ರೀತ್ ಬುಮ್ರಾ 2025 ರ ಏಷ್ಯಾ ಕಪ್‌ನಲ್ಲಿ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 9 ರಿಂದ ಏಷ್ಯಾಕಪ್ ಪ್ರಾರಂಭವಾಗುತ್ತಿದ್ದು, ವರದಿಯ ಪ್ರಕಾರ, ಜಸ್ಪ್ರೀತ್ ಬುಮ್ರಾ ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಾರೋ ಅಥವಾ ಇಲ್ಲವೋ ಎಂಬುದು ಖಚಿತವಾಗಿಲ್ಲ.

ಏಕೆಂದರೆ ಏಷ್ಯಾಕಪ್‌ನ ಫೈನಲ್ ಪಂದ್ಯ ಸೆಪ್ಟೆಂಬರ್ 29 ರಂದು ನಡೆಯಲಿದೆ. ಆ ಬಳಿಕ ಟೀಂ ಇಂಡಿಯಾ ಅಕ್ಟೋಬರ್ 2 ರಿಂದ ಅಕ್ಟೋಬರ್ 6 ರವರೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಬೇಕಾಗಿದೆ. ಬುಮ್ರಾ ಏಷ್ಯಾಕಪ್ ಆಡಿದರೆ, ಅವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.

ಜಸ್ಪ್ರೀತ್ ಬುಮ್ರಾ ಏಷ್ಯಾಕಪ್‌ನಲ್ಲಿ ಆಡಿದರೆ ಮತ್ತು ಟೀಂ ಇಂಡಿಯಾ ಫೈನಲ್‌ಗೆ ತಲುಪಿದರೆ, ಬುಮ್ರಾ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಾರೋ ಅಥವಾ ಏಷ್ಯಾಕಪ್‌ಗೆ ಪ್ರಾಮುಖ್ಯತೆ ನೀಡುತ್ತಾರೆಯೇ ಎಂಬ ಪ್ರಶ್ನೆ ಖಂಡಿತವಾಗಿಯೂ ಉದ್ಭವಿಸುತ್ತದೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ಬುಮ್ರಾ ಏಷ್ಯಾಕಪ್‌ನಲ್ಲಿ ಆಡಿದರೆ, ಅವರಿಗೆ ಒಂದು ತಿಂಗಳ ವಿರಾಮ ನೀಡಲಾಗುವುದು. ಆ ನಂತರ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲ್ಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ ಬುಮ್ರಾರನ್ನು ಯಾವ ಪಂದ್ಯಾವಳಿಯಲ್ಲಿ ಆಡಿಸಬೇಕು ಎಂಬ ನಿರ್ಧಾರವನ್ನು ಅಜಿತ್ ಅಗರ್ಕರ್ ಮತ್ತು ಗೌತಮ್ ಗಂಭೀರ್ ತೆಗೆದುಕೊಳ್ಳಬೇಕಾಗಿದೆ.

ಇನ್ನು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬುಮ್ರಾ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಈ ಸರಣಿಯಲ್ಲಿ ಮೂರು ಪಂದ್ಯಗಳನ್ನಾಡಿರುವ ಬುಮ್ರಾ 26 ರ ಸರಾಸರಿಯಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದೀಗ ಏಷ್ಯಾಕಪ್ 2025 ರಲ್ಲಿ ಜಸ್ಪ್ರೀತ್ ಬುಮ್ರಾ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.