
ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 50ನೇ ಅಂತಾರಾಷ್ಟ್ರೀಯ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 143 ರನ್ ಬಾರಿಸಿದ್ದ ರೂಟ್, ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ 103 ರನ್ ಸಿಡಿಸಿದ್ದಾರೆ.

ಈ ಮೂಲಕ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 50 ಶತಕ ಬಾರಿಸಿದ ಇಂಗ್ಲೆಂಡ್ನ ಮೊದಲ ಬ್ಯಾಟರ್ ಹಾಗೂ ವಿಶ್ವದ 9ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಲ್ಲದೆ, ಸಕ್ರಿಯ ಬ್ಯಾಟರ್ಗಳ ಪಟ್ಟಿಯಲ್ಲಿ 50 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ 2ನೇ ಆಟಗಾರ ಎಂಬ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ.

533 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 591 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 50 ಏಕದಿನ ಶತಕ, 29 ಟೆಸ್ಟ್ ಶತಕ ಹಾಗೂ 1 ಟಿ20 ಸೆಂಚುರಿಯೊಂದಿಗೆ ಒಟ್ಟು 80 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಸಕ್ರಿಯ ಬ್ಯಾಟರ್ಗಳ ಪಟ್ಟಿಯಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. 349 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರೂಟ್ 455 ಇನಿಂಗ್ಸ್ಗಳ ಮೂಲಕ ಒಟ್ಟು 50 ಶತಕಗಳನ್ನು ಬಾರಿಸಿದ್ದಾರೆ. ಈ ವೇಳೆ ಟೆಸ್ಟ್ನಲ್ಲಿ 34 ಸೆಂಚುರಿಸಿ ಸಿಡಿಸಿದರೆ, ಏಕದಿನ ಕ್ರಿಕೆಟ್ನಲ್ಲಿ 16 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಕ್ರಿಯ ಬ್ಯಾಟರ್ಗಳ ಪಟ್ಟಿಯಲ್ಲಿ 50 ಶತಕಗಳನ್ನು ಪೂರೈಸಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

ಹಾಗೆಯೇ 34ನೇ ಟೆಸ್ಟ್ ಶತಕದೊಂದಿಗೆ ಸುನಿಲ್ ಗವಾಸ್ಕರ್, ಬ್ರಿಯಾನ್ ಲಾರಾ, ಮಹೇಲ ಜಯವರ್ಧನೆ, ಯೂನಿಸ್ ಖಾನ್ ಅವರ ಟೆಸ್ಟ್ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಜೋ ರೂಟ್ 6ನೇ ಸ್ಥಾನಕ್ಕೇರಿದ್ದಾರೆ.