Joe Root: ಸೋತರೂ ದಾಖಲೆಯೊಂದಿಗೆ ತೆರಳಿದ ಜೋ ರೂಟ್
Joe Root Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಸೋಲಿನ ಹೊರತಾಗಿಯೂ ಇಂಗ್ಲೆಂಡ್ ಬ್ಯಾಟರ್ ಈ ಬಾರಿ ಕೂಡ ಭಾರತದಲ್ಲಿ ಮಿಂಚಿದ್ದಾರೆ. ಈ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
Updated on: Mar 10, 2024 | 1:54 PM

ಧರ್ಮಶಾಲಾದಲ್ಲಿ ನಡೆದ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋತರೂ, ಜೋ ರೂಟ್ (Joe Root) ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಜವಾಬ್ದಾರಿಯುತ ಆಟವಾಡಿದ ರೂಟ್ 84 ರನ್ ಬಾರಿಸಿ ಮಿಂಚಿದ್ದರು.

ಈ ಅರ್ಧಶತಕದೊಂದಿಗೆ ಜೋ ರೂಟ್ ಭಾರತದ ವಿರುದ್ಧ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅದು ಕೂಡ ಪಂಟರ್ ಖ್ಯಾತಿಯ ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಹೌದು, ಭಾರತದ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ವಿರುದ್ಧ 29 ಟೆಸ್ಟ್ ಪಂದ್ಯಗಳನ್ನಾಡಿರುವ ಪಾಂಟಿಂಗ್ 20 ಬಾರಿ 50+ ರನ್ ಕಲೆಹಾಕಿದ್ದರು.

ಇದೀಗ ಜೋ ರೂಟ್ 21ನೇ ಬಾರಿ 50+ ರನ್ ಬಾರಿಸುವ ಮೂಲಕ ಭಾರತದ ವಿರುದ್ಧ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಇದುವರೆಗೆ 30 ಪಂದ್ಯಗಳನ್ನಾಡಿರುವ ರೂಟ್ 10 ಶತಕ ಹಾಗೂ 11 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ 21 ಬಾರಿ 50+ ಸ್ಕೋರ್ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಅಷ್ಟೇ ಅಲ್ಲದೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ಕೂಡ ಜೋ ರೂಟ್ ಈ ಸರಣಿಯೊಂದಿಗೆ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ 32 ಟೆಸ್ಟ್ ಪಂದ್ಯಗಳಿಂದ ಒಟ್ಟು 2535 ರನ್ ಬಾರಿಸಿ ದಾಖಲೆ ಬರೆದಿದ್ದರು.

ಇದೀಗ ಜೋ ರೂಟ್ 30 ಟೆಸ್ಟ್ ಪಂದ್ಯಗಳ ಮೂಲಕ ಒಟ್ಟು 2846 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಇಂಡೊ-ಇಂಗ್ಲೆಂಡ್ ಟೆಸ್ಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.



















