Josh Inglis: ತೂಫಾನ್ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಜೋಶ್ ಇಂಗ್ಲಿಸ್
Scotland vs Australia: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಜೋಶ್ ಇಂಗ್ಲಿಸ್ ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸ್ಕಾಟ್ಲೆಂಡ್ ತಂಡವು 16.4 ಓವರ್ಗಳಲ್ಲಿ 126 ರನ್ಗಳಿಸಿ ಆಲೌಟ್ ಆಗಿದೆ.
1 / 8
ಸ್ಕಾಟ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 43 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಎಡಿನ್ಬರ್ಗ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಕಾಟ್ಲೆಂಡ್ ಬೌಲಿಂಗ್ ಆಯ್ದುಕೊಂಡಿದ್ದರು.
2 / 8
ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ (0) ಶೂನ್ಯಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಜೇಕ್ ಫ್ರೇಸರ್ 16 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
3 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜೋಶ್ ಇಂಗ್ಲಿಸ್ ಸ್ಕಾಟ್ಲೆಂಡ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಯಾಯಿತು. ಈ ಮೂಲಕ ಕೇವಲ 43 ಎಸೆತಗಳಲ್ಲಿ ಶತಕ ಪೂರೈಸಿ ಜೋಶ್ ಇಂಗ್ಲಿಸ್ ಬ್ಯಾಟ್ ಮೇಲೆಕ್ಕೆತ್ತಿದರು.
4 / 8
ಇದರೊಂದಿಗೆ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಜೋಶ್ ಇಂಗ್ಲಿಸ್ ಪಾಲಾಯಿತು. ಇದಕ್ಕೂ ಮುನ್ನ ಈ ರೆಕಾರ್ಡ್ ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಹೆಸರಿನಲ್ಲಿತ್ತು.
5 / 8
2013 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರೋನ್ ಫಿಂಚ್ ಕೇವಲ 47 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಹಾಗೆಯೇ 2023 ರಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 47 ಎಸೆತಗಳಲ್ಲಿ ಸೆಂಚುರಿ ಪೂರೈಸುವ ಮೂಲಕ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಈ ರೆಕಾರ್ಡ್ ಮುರಿಯುವಲ್ಲಿ ಜೋಸ್ ಇಂಗ್ಲಿಸ್ ಯಶಸ್ವಿಯಾಗಿದ್ದಾರೆ.
6 / 8
ಸ್ಕಾಟ್ಲೆಂಡ್ ವಿರುದ್ಧ ಕೇವಲ 43 ಎಸೆತಗಳಲ್ಲಿ 7 ಫೋರ್ ಹಾಗೂ 7 ಸಿಕ್ಸ್ಗಳೊಂದಿಗೆ ಸೆಂಚುರಿ ಸಿಡಿಸಿ ಜೋಶ್ ಇಂಗ್ಲಿಸ್ ಈ ಸಾಧನೆ ಮಾಡಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿತ್ತು.
7 / 8
ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ಧ 43 ಎಸೆತಗಳಲ್ಲಿ ಶತಕ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 43 ಎಸೆತಗಳಲ್ಲಿ 7 ಸಿಕ್ಸ್, 7 ಫೋರ್ಗಳೊಂದಿಗೆ ಸೆಂಚುರಿ ಸಿಡಿಸಿ ಜೋಶ್ ಇಂಗ್ಲಿಸ್ ಈ ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.
8 / 8
ಇನ್ನು ಜೋಶ್ ಇಂಗ್ಲಿಸ್ 49 ಎಸೆತಗಳಲ್ಲಿ ಬಾರಿಸಿದ 103 ರನ್ಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸ್ಕಾಟ್ಲೆಂಡ್ 126 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು 70 ರನ್ಗಳ ಭರ್ಜರಿ ಜಯ ಸಾಧಿಸಿದೆ.