ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಬರೋಬ್ಬರಿ 13 ವರ್ಷಗಳ ಬಳಿಕ ಶರವೇಗದ ಸೆಂಚುರಿ ಮೂಡಿಬಂದಿದೆ. ಅದು ಕೂಡ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ಯಾಟರ್ ಕಡೆಯಿಂದ. ಇಂತಹದೊಂದು ಸ್ಪೋಟಕ ಸೆಂಚುರಿ ಸಿಡಿಸಿದ್ದು ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜೋಶ್ ಇಂಗ್ಲಿಸ್. ಈ ಶತಕದೊಂದಿಗೆ ಇಂಗ್ಲಿಸ್, ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 50 ಓವರ್ಗಳಲ್ಲಿ 351 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋಶ್ ಇಂಗ್ಲಿಸ್ ಕೇವಲ 77 ಎಸೆತಗಳಲ್ಲಿ ಶತಕ ಸಿಡಿಸಿದರು.
ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಜೋಶ್ ಇಂಗ್ಲಿಸ್ ಹೆಸರು ಅಗ್ರಸ್ಥಾನಕ್ಕೇರಿತು. ಅದು ಸಹ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
2002 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ವೀರೇಂದ್ರ ಸೆಹ್ವಾಗ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೊಲಂಬೊದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸೆಹ್ವಾಗ್ ಕೇವಲ 77 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದರು.
ಇದೀಗ 13 ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಜೋಶ್ ಇಂಗ್ಲಿಸ್ ಯಶಸ್ವಿಯಾಗಿದ್ದಾರೆ. ಲಾಹೋರ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲಿಸ್ ಕೇವಲ 77 ಎಸೆತಗಳಲ್ಲಿ ಶತಕ ಪೂರೈಸಿ, ವೀರೇಂದ್ರ ಸೆಹ್ವಾಗ್ ಜತೆ ಸ್ಪೋಟಕ ಸೆಂಚುರಿ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ.
Published On - 9:04 am, Sun, 23 February 25