5 ಭರ್ಜರಿ ಸಿಕ್ಸ್, 5 ಫೋರ್: ದಾಖಲೆಯ ಅರ್ಧಶತಕ ಸಿಡಿಸಿದ ಪೊಲಾರ್ಡ್
CPL 2025: ಕೆರಿಬಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 19.5 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 3 ವಿಕೆಟ್ಗಳ ಜಯ ಸಾಧಿಸಿದೆ.
Updated on: Sep 07, 2025 | 12:18 PM

ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೀರನ್ ಪೊಲಾರ್ಡ್ (Kieron Pollard) ಆರ್ಭಟ ಮುಂದುವರೆದಿದೆ. ಕಳೆದ ಕೆಲ ಪಂದ್ಯಗಳ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದ ಪೊಲಾರ್ಡ್ ಇದೀಗ ವೇಗದ ಅರ್ಧಶತಕದೊಂದಿಗೆ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 17 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸುವ ಮೂಲಕ..!

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಸಿಪಿಎಲ್ನ 23ನೇ ಪಂದ್ಯದಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ಹಾಗೂ ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೊಲಾರ್ಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು.

ಬಿರುಸಿನ ಬ್ಯಾಟಿಂಗ್ನೊಂದಿಗೆ ಗಯಾನಾ ಅಮೆಝಾನ್ ವಾರಿಯರ್ಸ್ ಬೌಲರ್ಗಳ ಬೆಂಡೆತ್ತಿದ ಕೀರನ್ ಪೊಲಾರ್ಡ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಈ ಬಾರಿಯ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಮೂಡಿಬಂದ ಅತೀ ವೇಗದ ಹಾಫ್ ಸೆಂಚುರಿ ಎಂಬುದು ವಿಶೇಷ.

ಅಲ್ಲದೆ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ಕೀರನ್ ಪೊಲಾರ್ಡ್ ಮೂರನೇ ಸ್ಥಾನಕ್ಕೇರಿದ್ದಾರೆ. ಹಾಗೆಯೇ ಟ್ರಿನ್ಬಾಗೊ ನೈಟ್ ರೈಡರ್ಸ್ ಪರ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಹೆಗ್ಗಳಿಕೆಯನ್ನು ಕೂಡ ಪೊಲಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಆ್ಯಂಡ್ರೆ ರಸೆಲ್ ಹೆಸರಿನಲ್ಲಿದೆ. 2021 ರಲ್ಲಿ ಸೇಂಟ್ ಲೂಸಿಯಾ ವಿರುದ್ಧ ರಸೆಲ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇನ್ನು ಜೆಪಿ ಡುಮಿನಿ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 17 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 54 ರನ್ ಬಾರಿಸುವ ಮೂಲಕ ಕೀರನ್ ಪೊಲಾರ್ಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.
