
ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಫೀಲ್ಡಿಂಗ್ಗಾಗಿ ಕಣಕ್ಕಿಳಿದಿರುವ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (KL Rahul) ವಿಶೇಷ ದಾಖಲೆ ಬರೆದಿದ್ದಾರೆ.

ಈ ಪಂದ್ಯದಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆ ಭಾರತ ಪರ 50 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 37ನೇ ಆಟಗಾರ ಎನಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ಇದುವರೆಗೆ 84 ಟೆಸ್ಟ್ ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 2755 ರನ್ ಕಲೆಹಾಕಿದ್ದಾರೆ. ಈ ವೇಳೆ 8 ಭರ್ಜರಿ ಶತಕ ಹಾಗೂ 13 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದೀಗ 50ನೇ ಪಂದ್ಯದಲ್ಲಿ ಕಣಕ್ಕಿಳಿದಿರುವ ರಾಹುಲ್ ಕಡೆಯಿಂದ 50+ ಸ್ಕೋರ್ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಟೀಮ್ ಇಂಡಿಯಾ ಪರ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನಾಡಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ಒಟ್ಟು 15921 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವೇಳೆ ಕ್ರಿಕೆಟ್ ದೇವರ ಬ್ಯಾಟ್ನಿಂದ ಮೂಡಿಬಂದಿರುವುದು ಬರೋಬ್ಬರಿ 51 ಶತಕಗಳು. ಇದು ಕೂಡ ವಿಶ್ವ ದಾಖಲೆ ಎಂಬುದು ವಿಶೇಷ.

ಇನ್ನು ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಕೆಎಲ್ ರಾಹುಲ್ ಕೇವಲ ಬ್ಯಾಟರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಕಣಕ್ಕಿಳಿದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜ್ಯಾಕ್ ಲೀಚ್.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್.