
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಅಲಭ್ಯರಾಗಲಿದ್ದಾರೆ. ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗಿಲ್ಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಈ ಸರಣಿಯಿಂದ ಶುಭ್ಮನ್ ಗಿಲ್ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಶುಭ್ಮನ್ ಗಿಲ್ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಸದ್ಯ ಕೇಳಿ ಬರುತ್ತಿರುವ ಉತ್ತರ ಕನ್ನಡಿಗ ಕೆಎಲ್ ರಾಹುಲ್. ಹೌದು, ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಾಹುಲ್ ಅವರನ್ನು ನಾಯಕನನ್ನಾಗಿ ನೇಮಿಸುವ ಸಾಧ್ಯತೆಯಿದೆ.

ಕೆಎಲ್ ರಾಹುಲ್ ಈ ಹಿಂದೆ ಭಾರತ ತಂಡವನ್ನು 12 ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ರಾಹುಲ್ ಸಾರಥ್ಯದಲ್ಲಿ ಭಾರತ ತಂಡ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಅವರನ್ನು ನಾಯಕನನ್ನಾಗಿ ಮಾಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಇನ್ನು ಉಪನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಬಹುದು. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಭಾರತ ತಂಡದ ವೈಸ್ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗಿ ವೈಸ್ ಕ್ಯಾಪ್ಟನ್ ಸ್ಥಾನದಲ್ಲಿ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಭಾರತ ಏಕದಿನ ತಂಡ (ಸಂಭಾವ್ಯ) : ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್, ಶಿವಂ ದುಬೆ, ಪ್ರಸಿದ್ಧ್ ಕೃಷ್ಣ.