9 ಭರ್ಜರಿ ಸಿಕ್ಸ್, 13 ಫೋರ್: ದಾಖಲೆಯ ಸೆಂಚುರಿ ಸಿಡಿಸಿದ ಕರುಣ್ ನಾಯರ್
Maharaja Trophy 2024: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ವಾರಿಯರ್ಸ್ ತಂಡವು ಕರುಣ್ ನಾಯರ್ ಅವರ ಶತಕದ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ದ್ವಿತೀಯ ಇನಿಂಗ್ಸ್ ವೇಳೆ ಮಳೆ ಬಂದಿದ್ದರಿಂದ ಮಂಗಳೂರು ಡ್ರಾಗನ್ಸ್ ತಂಡಕ್ಕೆ 14 ಓವರ್ಗಳಲ್ಲಿ 166 ರನ್ಗಳ ಗುರಿ ನೀಡಲಾಗಿತ್ತು. ಈ ಗುರಿಯನ್ನು ಬೆನತ್ತಿದ ಮಂಗಳೂರು ಡ್ರಾಗನ್ಸ್ ತಂಡವು 138 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 27 ರನ್ಗಳ ಭರ್ಜರಿ ಜಯ ಸಾಧಿಸಿದೆ.
Updated on: Aug 20, 2024 | 7:32 AM

ಮಹಾರಾಜ ಟ್ರೋಫಿ ಟಿ20 ಟೂರ್ನಿಯ 10ನೇ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಕರುಣ್ ನಾಯರ್ ಹೊಸ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಡ್ರಾಗನ್ಸ್ ತಂಡವು ಮೈಸೂರು ವಾರಿಯರ್ಸ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಓಪನರ್ಗಳಾದ ಅಜಿತ್ ಕಾರ್ತಿಕ್ (11) ಹಾಗೂ ಎಸ್ಯು ಕಾರ್ತಿಕ್ (23) ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕರುಣ್ ನಾಯರ್ ಭರ್ಜರಿ ಬ್ಯಾಟಿಂಗ್ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ಗೆ ಒತ್ತು ನೀಡಿದ ಕರುಣ್ ನಾಯರ್ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇನ್ನು ಅರ್ಧಶತಕ ಬಳಿಕ ಆರ್ಭಟ ಮುಂದುವರೆಸಿದ ಕರುಣ್ ಮಂಗಳೂರು ಡ್ರಾಗನ್ಸ್ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಕೇವಲ 43 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಕರುಣ್ ನಾಯರ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ರೋಹನ್ ಪಾಟೀಲ್ ಹೆಸರಿನಲ್ಲಿತ್ತು. 2022ರ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ರೋಹನ್ ಕೇವಲ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 112 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

ಇದೀಗ ಮಂಗಳೂರು ಡ್ರಾಗನ್ಸ್ ವಿರುದ್ಧದ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿದ ಕರುಣ್ ನಾಯರ್ 9 ಭರ್ಜರಿ ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ ಅಜೇಯ 124 ರನ್ ಚಚ್ಚಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಕರುಣ್ ನಾಯರ್ ತಮ್ಮದಾಗಿಸಿಕೊಂಡಿದ್ದಾರೆ.
























