
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 10ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ (Meg Lanning) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಲ್ಯಾನಿಂಗ್ 41 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 55 ರನ್ ಬಾರಿಸಿದ್ದರು.

ಈ 55 ರನ್ಗಳೊಂದಿಗೆ ಮೆಗ್ ಲ್ಯಾನಿಂಗ್ ಟಿ20 ಕ್ರಿಕೆಟ್ನಲ್ಲಿ 9000 ರನ್ ಪೂರೈಸಿದ್ದಾರೆ. ಈ ಮೂಲಕ ಮಹಿಳಾ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 9 ಸಾವಿರ ರನ್ ಕಲೆಹಾಕಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್ನ ಸೋಫಿ ಡಿವೈನ್ ಹೆಸರಿನಲ್ಲಿತ್ತು. ಆರ್ಸಿಬಿ ಪರ ಆಡುತ್ತಿರುವ ಸೋಫಿ 297 ಇನಿಂಗ್ಸ್ಗಳ ಮೂಲಕ ಟಿ20 ಕ್ರಿಕೆಟ್ನಲ್ಲಿ 9 ಸಾವಿರ ರನ್ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಮೆಗ್ ಲ್ಯಾನಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ 289 ಇನಿಂಗ್ಸ್ಗಳ ಮೂಲಕ ಟಿ20 ಕ್ರಿಕೆಟ್ನಲ್ಲಿ 9 ಸಾವಿರ ರನ್ ಕಲೆಹಾಕಿದ್ದು, ಈ ಮೂಲಕ ವುಮೆನ್ಸ್ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 9000 ರನ್ ಪೂರೈಸಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ಬಾರಿಸಿದ 55 ರನ್ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು. 164 ರನ್ಗಳ ಗುರಿ ಪಡೆದ ಗುಜರಾತ್ ಜೈಂಟ್ಸ್ ತಂಡವು 138 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್ಗಳ ಭರ್ಜರಿ ಜಯ ಸಾಧಿಸಿದೆ.