
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 45ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಮುಂಬೈ ಇಂಡಿಯನ್ಸ್ (MI) ತಂಡ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ (58) ಅರ್ಧಶತಕ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 54 ರನ್ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಓವರ್ಗಳಲ್ಲಿ 215 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಲ್ಎಸ್ಜಿ ಪಡೆ 10 ಓವರ್ಗಳಲ್ಲಿ 100 ರನ್ಗಳ ಗಡಿ ತಲುಪಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಲಕ್ನೋ ಸೂಪರ್ ಜೈಂಟ್ಸ್ ತಂಡವು 161 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 54 ರನ್ಗಳ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ 150 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಯನ್ನು ಮುಂಬೈ ಇಂಡಿಯನ್ಸ್ ತನ್ನದಾಗಿಸಿಕೊಂಡಿದೆ. ಮುಂಬೈ ಪಡೆ ಐಪಿಎಲ್ನಲ್ಲಿ ಈವರೆಗೆ 271 ಪಂದ್ಯಗಳನ್ನಾಡಿದ್ದು, ಈ ವೇಳೆ 150 ಪಂದ್ಯಗಳಲ್ಲಿ ಗೆಲುವು ಹಾಗೂ 119 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.

ಇನ್ನು ಐಪಿಎಲ್ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್ಕೆ ತಂಡವು ಈವರೆಗೆ 248 ಪಂದ್ಯಗಳನ್ನಾಡಿದ್ದು, ಈ ವೇಳೆ 140 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 105 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ.

ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಕೆಕೆಆರ್ ತಂಡವು ಈವರೆಗೆ 261 ಪಂದ್ಯಗಳನ್ನಾಡಿದ್ದು, ಈ ವೇಳೆ 134 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 122 ಪಂದ್ಯಗಳಲ್ಲಿ ಸೋಲನುಭವಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದೆ. ಆರ್ಸಿಬಿ ತಂಡ ಈವರೆಗೆ 266 ಪಂದ್ಯಗಳನ್ನಾಡಿದ್ದು, ಈ ವೇಳೆ 129 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 131 ಮ್ಯಾಚ್ಗಳಲ್ಲಿ ಪರಾಜಯಗೊಂಡಿದೆ.