
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್ಗಳಲ್ಲಿ ಮುಖಾಮುಖಿಯಾಗಲಿದೆ. ಈ ಎಂಟು ಪಂದ್ಯಗಳಲ್ಲಿ ಮೂರು ಮ್ಯಾಚ್ಗಳಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.

ಹಾಗೆಯೇ ಭರ್ಜರಿ ಫಾರ್ಮ್ನಲ್ಲಿರುವ ಹಾರ್ದಿಕ್ ಪಾಂಡ್ಯ ಕೂಡ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಶುರುವಾಗಲಿದ್ದು, ಹೀಗಾಗಿ ಸ್ಟಾರ್ ಆಲ್ರೌಂಡರ್ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಂಡಿರಲಿಲ್ಲ. ಇದೀಗ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದಾರೆ. ಇದಾಗ್ಯೂ ಇಬ್ಬರು ಕಿವೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನ್ಯೂಝಿಲೆಂಡ್ ಸರಣಿಗೆ ಭಾರತದ ಸಂಭಾವ್ಯ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್.