Updated on: May 10, 2023 | 2:57 PM
ODI World Cup 2023: ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕುರಿತಾದ ಬಿಗ್ ಅಪ್ಡೇಟ್ವೊಂದು ಹೊರಬಿದ್ದಿದೆ.
ಕ್ರಿಕ್‌ಬಜ್ ವರದಿ ಪ್ರಕಾರ, ಅಹಮದಾಬಾದ್ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಮಹತ್ವದ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ ಟೂರ್ನಿಯ ಮದಗಜಗಳ ಕಾಳಗ ಇಂಡೋ-ಪಾಕ್ ಕದನಕ್ಕೂ ಡೇಟ್ ಫಿಕ್ಸ್ ಮಾಡಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಅಕ್ಟೋಬರ್ 15 ರಂದು ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಟೂರ್ನಿಯ ಒಂದು ಸೆಮಿಫೈನಲ್ ಪಂದ್ಯವನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯ ಅಹಮದಾಬಾದ್ ಅಥವಾ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.
ಇದಲ್ಲದೆ ಪಾಕಿಸ್ತಾನದ ಎಲ್ಲಾ ಪಂದ್ಯಗಳು ಅಹಮದಾಬಾದ್, ಚೆನ್ನೈ, ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪ್ರಸ್ತುತ ಮಾಹಿತಿ ಪ್ರಕಾರ, ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಏಕದಿನ ವಿಶ್ವಕಪ್ ಆಯೋಜಿಸಲು ನಿರ್ಧರಿಸಲಾಗಿದ್ದು, ಇದಾಗ್ಯೂ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿಲ್ಲ. ಹೀಗಾಗಿ ಆರಂಭಿಕ ಅಥವಾ ಅಂತ್ಯದ ದಿನಾಂಕದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.