ಸಿಕ್ಸ್ ಸಿಡಿಸಿಯೇ ಭರ್ಜರಿ ದಾಖಲೆ ಬರೆದ ಫಿಲ್ ಸಾಲ್ಟ್
New Zealand vs England, 2nd T20I: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 171 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.
Updated on: Oct 21, 2025 | 7:53 AM

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಫಿಲ್ ಸಾಲ್ಟ್ (Phil Salt) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಲ್ಟ್ 56 ಎಸೆತಗಳಲ್ಲಿ 11 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 85 ರನ್ ಬಾರಿಸಿದ್ದರು.

ಈ ಒಂದು ಸಿಕ್ಸ್ನೊಂದಿಗೆ ಫಿಲ್ ಸಾಲ್ಟ್ ಇಂಗ್ಲೆಂಡ್ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅಂದರೆ ಇಂಗ್ಲೆಂಡ್ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಜೇಸನ್ ರಾಯ್ (69) ಅವರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್ ಪರ ಈವರೆಗೆ 49 ಟಿ20 ಪಂದ್ಯಗಳನ್ನಾಡಿರುವ ಫಿಲ್ ಸಾಲ್ಟ್ ಆರಂಭಿಕನಾಗಿ ಕಣಕ್ಕಿಳಿದು 70 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಆಂಗ್ಲರ ಪರ ಟಿ20 ಕ್ರಿಕೆಟ್ನಲ್ಲಿ ಇನಿಂಗ್ಸ್ ಆರಂಭಿಸಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ಜೋಸ್ ಬಟ್ಲರ್. ಇಂಗ್ಲೆಂಡ್ ಪರ 143 ಟಿ20 ಪಂದ್ಯಗಳನ್ನಾಡಿರುವ ಬಟ್ಲರ್ ಆರಂಭಿಕನಾಗಿ ಕಣಕ್ಕಿಳಿದು ಬರೋಬ್ಬರಿ 102 ಸಿಕ್ಸ್ ಸಿಡಿಸಿದ್ದಾರೆ. ಅಲ್ಲದೆ ಒಟ್ಟು 173 ಸಿಕ್ಸರ್ಗಳೊಂದಿಗೆ ಇಂಗ್ಲೆಂಡ್ ಪರ ಟಿ20 ಯಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಫಿಲ್ ಸಾಲ್ಟ್ ಅವರ ಭರ್ಜರಿ ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 171 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಇಂಗ್ಲೆಂಡ್ 65 ರನ್ಗಳ ಜಯ ಸಾಧಿಸಿದೆ.
