- Kannada News Photo gallery Cricket photos Players who missed out on India's ODI squad Australia Series
India Squad: ಟೀಮ್ ಇಂಡಿಯಾದಿಂದ ಐವರು ಆಟಗಾರರು ಔಟ್
India Squad For Australia: ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಭಾರತ ಏಕದಿನ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಐವರು ಪ್ರಮುಖ ಆಟಗಾರರು ಸ್ಥಾನ ಪಡೆದಿಲ್ಲ. ಅಂದರೆ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಐವರನ್ನು ಈ ಬಾರಿಯ ಸರಣಿಗೆ ಆಯ್ಕೆ ಮಾಡಲಾಗಿಲ್ಲ.
Updated on: Oct 05, 2025 | 8:06 AM

ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಣ ಏಕದಿನ ಸರಣಿಯು ಇಂದಿನಿಂದ (ಅ.19) ಶುರುವಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾದ ಐವರು ಆಟಗಾರರು ಅಲಭ್ಯರಾದರೆ, ಆಸ್ಟ್ರೇಲಿಯಾದ ಏಳು ಆಟಗಾರರು ಹೊರಗುಳಿದಿದ್ದಾರೆ. ಅಂದರೆ ಕಳೆದ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳನ್ನಾಡಿದ ಕೆಲ ಆಟಗಾರರು ಈ ಬಾರಿ ಕಾಣಿಸಿಕೊಳ್ಳುವುದಿಲ್ಲ. ಅವರೆಂದರೆ...

ಅಂದರೆ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಐವರು ಆಟಗಾರರು ಈ ಬಾರಿಯ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ. ಅದರಂತೆ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಹಾರ್ದಿಕ್ ಪಾಂಡ್ಯ: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಆಲ್ರೌಂಡರ್ ಪ್ರದರ್ಶನ ನೀಡಿ ಮಿಂಚಿದ್ದ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಪಾಂಡ್ಯ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಆಸೀಸ್ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಆದರೆ ಇದೀಗ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗಿಡಲಾಗಿದೆ.

ರಿಷಭ್ ಪಂತ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಇನ್ನೂ ಕೂಡ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಪಂತ್ ಅವರನ್ನು ಆಯ್ಕೆ ಮಾಡಲಾಗಿಲ್ಲ.

ರವೀಂದ್ರ ಜಡೇಜಾ: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಸ್ಪಿನ್ ಆಲ್ರೌಂಡರ್ ಆಗಿ ಕಣಕ್ಕಿಳಿದಿದ್ದ ರವೀಂದ್ರ ಜಡೇಜಾ ಅವರನ್ನು ಸಹ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

ವರುಣ್ ಚಕ್ರವರ್ತಿ: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.




