ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಒಟ್ಟು 12 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ (R Ashwin) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ಕಬಳಿಸಿದ್ದ ಅಶ್ವಿನ್, ದ್ವಿತೀಯ ಇನಿಂಗ್ಸ್ನಲ್ಲಿ 7 ವಿಕೆಟ್ ಪಡೆದರು. ಇದರೊಂದಿಗೆ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು.
ಇದಕ್ಕೂ ಮುನ್ನ ಈ ಸ್ಥಾನವನ್ನು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅಲಂಕರಿಸಿದ್ದರು. ಭಜ್ಜಿ 365 ಪಂದ್ಯಗಳಲ್ಲಿ ಒಟ್ಟು 707 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದರು.
ಇದೀಗ ಕೇವಲ 271 ಪಂದ್ಯಗಳಲ್ಲಿ 709 ವಿಕೆಟ್ ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಅಲ್ಲದೆ ಭಾರತದ ಪರ ಅತೀ ಹೆಚ್ಚು ವಿಕೆಟ್ ಕಬಳಿಸಿದವರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ಅನಿಲ್ ಕುಂಬ್ಳೆ ಎಂಬುದು ವಿಶೇಷ. ಭಾರತದ ಪರ ಒಟ್ಟು 401 ಪಂದ್ಯಗಳನ್ನಾಡಿರುವ ಕುಂಬ್ಳೆ 953 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಮುರಿಯುವುದು ಕಷ್ಟಸಾಧ್ಯ ಎಂದೇ ಹೇಳಬಹುದು.