
ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆರಂಭಿಕ ಆಟಗಾರ ರೀಝ ಹೆಂಡ್ರಿಕ್ಸ್.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡದ ಪರ ಓಪನರ್ ಸೈಮ್ ಅಯ್ಯೂಬ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಸೈಮ್ 57 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 98 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.

207 ರನ್ಗಳ ಕಠಿಣ ಗುರಿ ಪಡೆದ ಸೌತ್ ಆಫ್ರಿಕಾ ತಂಡಕ್ಕೆ ರೀಝ ಹೆಂಡ್ರಿಕ್ಸ್ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದ ರೀಝ ಪಾಕ್ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ 29 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

ಹಾಫ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ ರೀಝ ಹೆಂಡ್ರಿಕ್ಸ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಈ ಮೂಲಕ ಕೇವಲ 54 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಸೆಂಚುರಿ ಬಳಿಕ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರೀಝ ಹೆಂಡ್ರಿಕ್ಸ್ 63 ಎಸೆತಗಳಲ್ಲಿ 7 ಫೋರ್ ಹಾಗೂ 10 ಸಿಕ್ಸ್ಗಳೊಂದಿಗೆ 117 ರನ್ ಚಚ್ಚಿದರು.

ಮತ್ತೊಂದೆಡೆ ರೀಝ ಹೆಂಡ್ರಿಕ್ಸ್ಗೆ ಉತ್ತಮ ಸಾಥ್ ನೀಡಿದ ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 38 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 66 ರನ್ ಬಾರಿಸಿದರು. ಈ ಮೂಲಕ 19.3 ಓವರ್ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿ ಸೌತ್ ಆಫ್ರಿಕಾ ತಂಡಕ್ಕೆ 7 ವಿಕೆಟ್ಗಳ ಜಯ ತಂದುಕೊಟ್ಟರು.