ರಿಚಾ ಘೋಷ್ ಸಿಡಿಲಬ್ಬರಕ್ಕೆ ದಾಖಲೆ ಧೂಳೀಪಟ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ ಬರೋಬ್ಬರಿ 199 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ರಿಚಾ ಘೋಷ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಆರ್ಸಿಬಿ ತಂಡ 15 ರನ್ಗಳಿಂದ ಸೋಲನುಭವಿಸಿದೆ.
Updated on: Jan 27, 2026 | 8:06 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ (Richa Ghosh) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ 90 ರನ್ ಸಿಡಿಸುವ ಮೂಲಕ ಎಂಬುದು ವಿಶೇಷ.

ವಡೋದರಾದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 16ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸೀವರ್ ಬ್ರಂಟ್ ಅಜೇಯ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 199 ರನ್ ಕಲೆಹಾಕಿತು.

200 ರನ್ಗಳ ಕಠಿಣ ಗುರಿ ಬೆನ್ನತ್ತಿದ ಆರ್ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 35 ರನ್ಗಳಿಸುವಷ್ಟರಲ್ಲಿ ಆರ್ಸಿಬಿ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ ದಿಟ್ಟ ಹೋರಾಟ ಪ್ರದರ್ಶಿಸಿದರು.

ಮುಂಬೈ ಇಂಡಿಯನ್ಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಚಾ ಘೋಷ್ ಕೇವಲ 50 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್ಗಳೊಂದಿಗೆ 90 ರನ್ ಬಾರಿಸಿದರು. ಈ 90 ರನ್ಗಳೊಂದಿಗೆ ರಿಚಾ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸವನ್ನು ಸಹ ಬರೆದರು.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 5 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅತ್ಯಧಿಕ ರನ್ ಕಲೆಹಾಕಿದ ಭರ್ಜರಿ ದಾಖಲೆ ರಿಚಾ ಘೋಷ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆರ್ಸಿಬಿ ತಂಡ ನಾಡಿನ್ ಡಿ ಕ್ಲರ್ಕ್ ಹೆಸರಿನಲ್ಲಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಅಜೇಯ 63 ರನ್ ಸಿಡಿಸುವ ಮೂಲಕ ನಾಡಿನ್ ಈ ದಾಖಲೆ ನಿರ್ಮಿಸಿದ್ದರು.

ಇದೀಗ ಕೇವಲ 50 ಎಸೆತಗಳಲ್ಲಿ 90 ರನ್ ಸಿಡಿಸಿ ರಿಚಾ ಘೋಷ್ ಈ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀ್ಗ್ ಇತಿಹಾಸದಲ್ಲೇ ಟಾಪ್-5 ಕ್ಕಿಂತ ಕೆಳಗೆ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಗರಿಷ್ಠ ವೈಯುಕ್ತಿಕ ಸ್ಕೋರ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ರಿಚಾ ಘೋಷ್ ಅವರ ಈ ಏಕಾಂಗಿ ಹೋರಾಟದ ಹೊರತಾಗಿಯೂ ಈ ಪಂದ್ಯದಲ್ಲಿ ಆರ್ಸಿಬಿ ತಂಡವು 15 ರನ್ಗಳಿಂದ ಸೋಲೊಪ್ಪಿಕೊಂಡಿತು.
