
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ 271 ರನ್‌ಗಳ ಗುರಿ ನೀಡಿದೆ. ಇದೀಗ ಗುರಿ ಬೆನ್ನಟ್ಟಿರುವ ಭಾರತ ಆರಂಭಿಕರು ಉತ್ತಮ ಆರಂಭ ಒದಗಿಸಿಕೊಟ್ಟಿದ್ದಾರೆ.

ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಜೊತೆಯಾಗಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಇನ್ನು ಇದೇ ವೇಳೆ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲೊಂದನ್ನು ಸ್ಥಾಪಿಸಿದ್ದಾರೆ. ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ 27 ರನ್‌ಗಳ ಗಡಿ ದಾಟುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್‌ಗಳನ್ನು ಪೂರೈಸಿದ್ದಾರೆ.

ಈ ಮೂಲಕ ರೋಹಿತ್ ಶರ್ಮಾ ಭಾರತ ಪರ 20,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ಗೂ ಮೊದಲು, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ರನ್‌ಗಳ ಗಡಿಯನ್ನು ದಾಟಿದ ಭಾರತೀಯ ಕ್ರಿಕೆಟಿಗರಾಗಿದ್ದರು. ಇದೀಗ ರೋಹಿತ್ ಈ ಮೂವರು ದಿಗ್ಗಜರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ 34,357 ರನ್‌ಗಳನ್ನು ಬಾರಿಸಿದ್ದರೆ, ವಿರಾಟ್ ಕೊಹ್ಲಿ ಇದುವರೆಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27,910 ರನ್‌ಗಳನ್ನು ದಾಖಲಿಸಿದ್ದಾರೆ. ರಾಹುಲ್ ದ್ರಾವಿಡ್ 24,208 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಈಗ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಕೂಡ ಸೇರಿದ್ದಾರೆ.

ರೋಹಿತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ಸಂಬಂಧಿಸಿದಂತೆ, ಅವರು 67 ಟೆಸ್ಟ್ ಪಂದ್ಯಗಳಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳು ಸೇರಿದಂತೆ 4301 ರನ್ ಬಾರಿಸಿದ್ದಾರೆ. ಹಾಗೆಯೇ 278 ಏಕದಿನ ಪಂದ್ಯಗಳಲ್ಲಿ 33 ಶತಕಗಳು ಮತ್ತು 60 ಅರ್ಧಶತಕಗಳು ಸೇರಿದಂತೆ 11468* ರನ್ ಸಿಡಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ, ರೋಹಿತ್ 159 ಪಂದ್ಯಗಳಲ್ಲಿ 4231 ರನ್ ಗಳಿಸಿದ್ದಾರೆ.