೧೦೯ ದಿನಗಳ ಅಂತರದಲ್ಲಿ ಸಚಿನ್ ವಿಶ್ವ ದಾಖಲೆ ಅಳಿಸಿ ಹಾಕಿದ ರೋಹಿತ್ ಶರ್ಮಾ
Rohit Sharma World Record: ಐಸಿಸಿ ಪ್ರಕಟಿಸಿರುವ ಒಡಿಐ ಬ್ಯಾಟರ್ಗಳ ನೂತನ ರ್ಯಾಂಕಿಂಗ್ನಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿದ್ದ ಹಿಟ್ಮ್ಯಾನ್ ಈ ಬಾರಿ ಶುಭ್ಮನ್ ಗಿಲ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
Updated on:Oct 30, 2025 | 7:54 AM

ಬರೋಬ್ಬರಿ 18 ವರ್ಷಗಳ ಬಳಿಕ ರೋಹಿತ್ ಶರ್ಮಾ (Rohit Sharma) ಐಸಿಸಿ ಒಡಿಐ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟ್ಸ್‌ಮನ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಒಡಿಐ ಕ್ರಿಕೆಟ್ ಇತಿಹಾಸದಲ್ಲಿ ನಂವರ್ ೧ ಸ್ಥಾನಕ್ಕೇರಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2011 ರಲ್ಲಿ ಐಸಿಸಿ ಒಡಿಐ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಾಗ ಸಚಿನ್ ಅವರ ವಯಸ್ಸು 38 ವರ್ಷ, 73 ದಿನಗಳು. ಈ ಮೂಲಕ ಐಸಿಸಿ ರ್ಯಾಂಕಿಂಗ್ನ ಟಾಪ್-೧ ನಲ್ಲಿ ಕಾಣಿಸಿಕೊಂಡ ಅತ್ಯಂತ ಹಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಈ ವಿಶ್ವ ದಾಖಲೆ ಮುರಿಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾಗಿದ್ದಾರೆ. ಹಿಟ್ ಮ್ಯಾನ್ 38 ವರ್ಷ, 182 ದಿನಗಳ ವಯಸ್ಸಿನಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಐಸಿಸಿ ರ್ಯಾಂಕಿಂಗ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಂದರೆ ಸಚಿನ್ಗಿಂತ 109 ದಿನಗಳ ಹಿರಿಯನಾಗಿ ಏಕದಿನ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸುವ ಒಡಿಐ ರ್ಯಾಂಕಿಂಗ್ನಲ್ಲಿ ಮೊದಲ ಸ್ಥಾನಕ್ಕೇರಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.
Published On - 7:54 am, Thu, 30 October 25
