Rohit Sharma: ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ರೋಹಿತ್ ಶರ್ಮಾ
India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 27 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಈ ದಾಖಲೆಯನ್ನು ಬರೆದಿರುವುದು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
Updated on: Feb 04, 2024 | 10:58 AM

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಒಟ್ಟು 27 ರನ್ ಕಲೆಹಾಕುವ ಮೂಲಕ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 14 ರನ್ ಬಾರಿಸಿದ್ದ ರೋಹಿತ್ ಶರ್ಮಾ ದ್ವಿತೀಯ ಇನಿಂಗ್ಸ್ನಲ್ಲಿ 13 ರನ್ಗಳಿಸಿ ಕ್ಲೀನ್ ಬೌಲ್ಡ್ ಆದರು. ಈ 27 ರನ್ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಹಿಟ್ಮ್ಯಾನ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 60 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 2235 ರನ್ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿರುವುದು ವಿಶೇಷ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 49 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ ಇದುವರೆಗೆ 2242 ರನ್ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ರನ್ ಪೇರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿನಲ್ಲಿದೆ. WTC ನಲ್ಲಿ 89 ಇನಿಂಗ್ಸ್ ಆಡಿರುವ ರೂಟ್ ಇದುವರೆಗೆ 4023 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.
