
ಐಸಿಸಿ ಏಕದಿನ ವಿಶ್ವಕಪ್ 2023 ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಭಾನುವಾರ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗುತ್ತಿವೆ. ನಾಳೆ ಮಧ್ಯಾಹ್ನ 2 ಗಂಟೆಗೆ ಪಂದ್ಯ ಶುರುವಾಗಲಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿ ಮಾತನಾಡಲಿದ್ದಾರೆ. ಇಂದು ಸಂಜೆ 5:45ಕ್ಕೆ ಸುದ್ದಿಗೋಷ್ಠಿ ಏರ್ಪಡಿಸಲಾಗಿದ್ದು, ರೋಹಿತ್ ಪ್ರಮುಖ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಮುಖ್ಯವಾಗಿ ತಂಡದ ಯೋಜನೆ, ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ ನೀಡಲಿದ್ದಾರೆ.

ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆಡಿದ ಎಲ್ಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 70 ರನ್‌ಗಳಿಂದ ಸೋಲಿಸಿ ಫೈನಲ್ಗೆ ಪ್ರವೇಶ ಪಡೆಯಿತು. ಮತ್ತೊಂದೆಡೆ, ಭಾರತ ತಂಡವು ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಹೆಚ್ಚು ವಿಕೆಟ್‌ಗಳನ್ನು ಪಡೆದ ತಂಡವಾಗಿದೆ.

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೇವಲ 10 ಪಂದ್ಯಗಳಲ್ಲಿ 711 ರನ್ ಗಳಿಸಿ ಅತಿ ಹೆಚ್ಚು ರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ಹತ್ತು ಪಂದ್ಯಗಳಲ್ಲಿ 550 ರನ್ ಗಳಿಸಿ ಟಾಪ್ 5ರಲ್ಲಿದ್ದಾರೆ. ಮತ್ತೊಂದೆಡೆ, ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ. ಬಲಗೈ ವೇಗಿ ಕೇವಲ ಆರು ಪಂದ್ಯಗಳಲ್ಲಿ 23 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ದಾಖಲೆ ಕೂಡ ಉತ್ತಮವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣದಲ್ಲಿ ಮೆನ್ ಇನ್ ಬ್ಲೂ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಗುಂಪು ಹಂತದಲ್ಲಿ ಪಾಕಿಸ್ತಾನದ ವಿರುದ್ಧ ರೋಹಿತ್ ಶರ್ಮಾ ಪಡೆ 7 ವಿಕೆಟ್‌ಗಳಿಂದ ಇದೇ ಮೈದಾನದಲ್ಲಿ ಜಯ ಸಾಧಿಸಿತ್ತು.

ಇನ್ನು ಈಗಾಗಲೇ ಅಹ್ಮದಾಬಾದ್‌ಗೆ ತಲುಪಿರುವ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಮೊದಲ ದಿನ ನಡೆದ ಐಚ್ಛಿಕ ತರಬೇತಿಯಲ್ಲಿ ಭಾರತ ತಂಡದ 6 ಸದಸ್ಯರು ಭಾಗವಹಿಸಿದ್ದರು. ಭಾರತದ ನಾಯಕ ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ, ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಕ್ಯಾಚಿಂಗ್ ಪ್ರ್ಯಾಕ್ಟೀಸ್ ಮಾಡುತ್ತಿರುವುದು ಕಂಡುಬಂತು.