Updated on: Mar 20, 2022 | 9:09 PM
ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆದರೆ ಅತ್ತ ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ ನಡುವೆ ಸರಣಿ ನಡೆಯುತ್ತಿದೆ. ಈ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಕ್ವಿಂಟನ್ ಡಿಕಾಕ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವು ಆರೀಫ್ ಹುಸೈನ್ (72) ಅವರ ಅರ್ಧಶತಕದ ನೆರವಿನಿಂದ 9 ವಿಕೆಟ್ ಕಳೆದುಕೊಂಡು 194 ರನ್ಗಳಿಸಿತು.
ಈ ಸಾಧಾರಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡಕ್ಕೆ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಸ್ಪೋಟಕ ಆರಂಭ ಒದಗಿಸಿದರು. ಕೇವಲ 26 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಅಬ್ಬರಿಸಿದರು. 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 28ನೇ ಅರ್ಧಶತಕ ಪೂರೈಸಿದ ಡಿಕಾಕ್ ಅಂತಿಮವಾಗಿ 62 ರನ್‌ಗಳಿಸಿದರು. ಅಷ್ಟರಲ್ಲಾಗಲೇ ಸೌತ್ ಆಫ್ರಿಕಾ ಗೆಲುವಿನತ್ತ ಮುಖಮಾಡಿತು.
ಅದರಂತೆ 37.2 ಓವರ್ಗಳಲ್ಲಿ ಸೌತ್ ಆಫ್ರಿಕಾ ತಂಡವು 3 ವಿಕೆಟ್ ನಷ್ಟಕ್ಕೆ 195 ರನ್ಗಳಿಸಿ 7 ವಿಕೆಟ್ಗಳ ಜಯ ಸಾಧಿಸಿತು. ವಿಶೇಷ ಎಂದರೆ ಡಿಕಾಕ್ ಅವರ ಈ ಸ್ಪೋಟಕ ಬ್ಯಾಟಿಂಗ್ಗೆ ಇತ್ತ ಕೆಎಲ್ ರಾಹುಲ್ ಫುಲ್ ಖುಷ್ ಆಗಿದ್ದಾರೆ. ಏಕೆಂದರೆ ಈ ಬಾರಿಯ ಐಪಿಎಲ್ನಲ್ಲಿ ಡಿಕಾಕ್ ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ಪರ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಡಿಕಾಕ್ ವಿಕೆಟ್ ಕೀಪರ್ ಆಗಿ ಕೂಡ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಭರ್ಜರಿ ಫಾರ್ಮ್ ಪ್ರದರ್ಶಿಸುವ ಮೂಲಕ ಡಿಕಾಕ್ ಐಪಿಎಲ್ನಲ್ಲಿ ಅಬ್ಬರಿಸುವ ಸೂಚನೆ ನೀಡಿದ್ದಾರೆ.