
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಶುಭ್ಮನ್ ಗಿಲ್ (Shubman Gill) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್ಮನ್ ಗಿಲ್ 176 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ ಶತಕ ಪೂರೈಸಿದರು. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ 38 ಪಂದ್ಯಗಳನ್ನಾಡಿರುವ ಪಂತ್ 67 ಇನಿಂಗ್ಸ್ಗಳ ಮೂಲಕ ಒಟ್ಟು 2731 ರನ್ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ರನ್ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಶುಭ್ಮನ್ ಗಿಲ್ ಮುರಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯ್ಶಿಪ್ ಸರಣಿಯಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 10 ಶತಕಗಳೊಂದಿಗೆ ಒಟ್ಟು 2796* ರನ್ ಕಲೆಹಾಕಿದ್ದಾರೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ನ ಜೋ ರೂಟ್. WTC ನಲ್ಲಿ 69 ಪಂದ್ಯಗಳನ್ನಾಡಿರುವ ರೂಟ್ ಒಟ್ಟು 6080 ರನ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.