ಟೆನ್ ಟನ್ನೊಂದಿಗೆ ಹಿಟ್ಮ್ಯಾನ್ ದಾಖಲೆ ಮುರಿದ ಶುಭ್ಮನ್ ಗಿಲ್
India vs West Indies, 2nd Test: ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (175) ಹಾಗೂ ಶುಭ್ಮನ್ ಗಿಲ್ (129) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನೊಂದಿಗೆ ಭಾರತ ತಂಡ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ.
Updated on: Oct 12, 2025 | 8:23 AM

ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಶುಭ್ಮನ್ ಗಿಲ್ (Shubman Gill) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್ಮನ್ ಗಿಲ್ 196 ಎಸೆತಗಳಲ್ಲಿ 16 ಫೋರ್ ಹಾಗೂ 2 ಸಿಕ್ಸರ್ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಆಕರ್ಷಕ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಒಟ್ಟು 40 ಪಂದ್ಯಗಳನ್ನಾಡಿದ್ದರು. ಈ ವೇಳೆ ಆಡಿದ 69 ಇನಿಂಗ್ಸ್ಗಳಲ್ಲಿ ಒಟ್ಟು 9 ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆ ಮುರಿಯುವ ಮೂಲಕ ಶುಭ್ಮನ್ ಗಿಲ್ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್ಗಳ ಮೂಲಕ ಒಟ್ಟು 10 ಶತಕ ಸಿಡಿಸಿದ್ದಾರೆ. ಈ ಮೂಲಕ WTC ಇತಿಹಾಸದಲ್ಲೇ ಭಾರತದ ಪರ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ 129 ರನ್ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ರಿಷಭ್ ಪಂತ್ (2731) ಹೆಸರಿನಲ್ಲಿತ್ತು. ಇದೀಗ 2826 ರನ್ಗಳೊಂದಿಗೆ ಈ ಪಟ್ಟಿಯಲ್ಲಿ ಶುಭ್ಮನ್ ಗಿಲ್ ಮೊದಲ ಸ್ಥಾನಕ್ಕೇರಿದ್ದಾರೆ.




