- Kannada News Photo gallery Cricket photos Shubman Gill now has Most runs for India in a Test series in England
ದ್ರಾವಿಡ್ ದಾಖಲೆಯನ್ನು ಅಳಿಸಿ ಹಾಕಿದ ಶುಭ್ಮನ್ ಗಿಲ್
India vs Engalnd 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಉಭಯ ತಂಡಗಳು 387 ರನ್ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 192 ರನ್ಗಳಿಗೆ ಆಲೌಟ್ ಆಗಿದೆ. ಇದೀಗ 193 ರನ್ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್ ಕಲೆಹಾಕಿದೆ.
Updated on: Jul 14, 2025 | 9:58 AM

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೂಲಕ ಶುಭ್ಮನ್ ಗಿಲ್ (Shubman Gill) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಲಾರ್ಡ್ಸ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ಒಟ್ಟು 22 ರನ್ಗಳಿಸಿದ್ದಾರೆ.

ಈ 22 ರನ್ಗಳೊಂದಿಗೆ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು.

2002 ರಲ್ಲಿ ಇಂಗ್ಲೆಂಡ್ನಲ್ಲಿ ನಡೆದ ಟೆಸ್ಟ್ ಸರಣಿಯ 4 ಪಂದ್ಯಗಳ ಮೂಲಕ ರಾಹುಲ್ ದ್ರಾವಿಡ್ ಒಟ್ಟು 602 ರನ್ಗಳಿಸಿದ್ದರು. ಈ ಮೂಲಕ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ವಿಶೇಷ ಎಂದರೆ ದ್ರಾವಿಡ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯಲ್ಲಿ 600+ ರನ್ ಗಳಿಸಿರಲಿಲ್ಲ.

ಆದರೆ ಈ ಬಾರಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಶುಭ್ಮನ್ ಗಿಲ್ ಯಶಸ್ವಿಯಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಸರಣಿಯ ಮೂರು ಪಂದ್ಯಗಳ ಮೂಲಕ ಶುಭ್ಮನ್ ಗಿಲ್ 607 ರನ್ಗಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೂ ಶುಭ್ಮನ್ ಗಿಲ್ ಪಾತ್ರರಾಗಿದ್ದಾರೆ. ಈ ಮೂಲಕ ನಾಯಕನಾಗಿ ಚೊಚ್ಚಲ ಟೆಸ್ಟ್ ಸರಣಿಯಲ್ಲೇ ದಾಖಲೆಗಳೊಂದಿಗೆ ಶುಭ್ಮನ್ ಶುಭಾರಂಭ ಮಾಡಿದ್ದು, ಈ ಶುಭಾರಂಭದೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಖಲೆಗಳನ್ನು ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಿದೆ.
