ಸ್ಮೃತಿ ಮಂಧಾನ ವೇಗಕ್ಕೆ ವಿಶ್ವ ದಾಖಲೆಯೇ ಉಡೀಸ್
India Women vs Sri Lanka Women: ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 221 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಶ್ರೀಲಂಕಾ 191 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 30 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂಧಾನ ವಿಶೇಷ ವಿಶ್ವ ದಾಖಲೆ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.
Updated on: Dec 29, 2025 | 7:31 AM

ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗವಾಗಿ ರನ್ಗಳಿಸುವ ಮೂಲಕ. ಈ ವೇಗದೊಂದಿಗೆ ಸ್ಮೃತಿ ಮುರಿದಿರುವುದು ಟೀಮ್ ಇಂಡಿಯಾ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆಯನ್ನು ಎಂಬುದು ವಿಶೇಷ.

ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಆರಂಭಿಕಗಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಕೇವಲ 48 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಸ್ಫೋಟಕ 80 ರನ್ ಬಾರಿಸಿದ್ದರು.

ಈ 80 ರನ್ಗಳೊಂದಿಗೆ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 10000 ರನ್ ಪೂರೈಸಿದ್ದಾರೆ. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ ಹೆಸರಿನಲ್ಲಿತ್ತು. ಮಿಥಾಲಿ 291 ಇನಿಂಗ್ಸ್ಗಳ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ 10000 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 10 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಸ್ಮೃತಿ ಮಂಧಾನ ಅಳಿಸಿ ಹಾಕಿದ್ದಾರೆ. ಸ್ಮೃತಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 10 ಸಾವಿರ ರನ್ಗಳನ್ನು ಪೂರೈಸಲು ತೆಗದುಕೊಂಡಿರುವುದು ಕೇವಲ 281 ಇನಿಂಗ್ಸ್ಗಳನ್ನು ಮಾತ್ರ. ಈ ಮೂಲಕ ವುಮೆನ್ಸ್ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ.
