
ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸ್ಫೋಟಕ ಶತಕ ಸಿಡಿಸಿದ್ದಾರೆ. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಅವರ ಚೊಚ್ಚಲ ಶತಕವಾಗಿದೆ. ಈ ಶತಕದೊಂದಿಗೆ ಮೂರು ಸ್ವರೂಪಗಳಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಮಂಧಾನ ಪಾತ್ರರಾಗಿದ್ದಾರೆ.

ಇದೀಗ ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿರುವ ಸ್ಮೃತಿ ಮಂಧಾನ ಈಗಾಗಲೇ ಏಕದಿನ ಕ್ರಿಕೆಟ್‌ನಲ್ಲಿ 11 ಶತಕಗಳು ಮತ್ತು ಟೆಸ್ಟ್‌ನಲ್ಲಿ 2 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ಕ್ರಿಕೆಟ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶತಕ ಸಿಡಿಸಿದ ಐದನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.

ಟ್ರೆಂಟ್ ಬ್ರಿಡ್ಜ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸ್ಮೃತಿ ಮಂಧಾನ 15 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ 112 ರನ್‌ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ಈ ಮೂಲಕ ಭಾರತೀಯ ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ ಸ್ಮೃತಿ ಮಂಧಾನ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಶತಕ ಬಾರಿಸಿದ ಭಾರತದ ಎರಡನೇ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರಿಗಿಂತ ಮೊದಲು, ಹರ್ಮನ್ಪ್ರೀತ್ ಕೌರ್ (103) 2018 ರಲ್ಲಿ ಶತಕ ಸಿಡಿಸಿದ್ದರು.

ಇದಲ್ಲದೆ ಟ್ರೆಂಟ್ ಬ್ರಿಡ್ಜ್‌ನಲ್ಲಿ ಟಿ20 ಶತಕ ಬಾರಿಸಿದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೂ ಸ್ಮೃತಿ ಪಾತ್ರರಾಗಿದ್ದಾರೆ. ಈ ಮೈದಾನದಲ್ಲಿ ಈ ಸಾಧನೆ ಮಾಡಿದ ಭಾರತದ ಎರಡನೇ ಕ್ರಿಕೆಟರ್ ಎಂಬ ಸಾಧನೆಯೂ ಸ್ಮೃತಿ ಪಾಲಾಗಿದೆ. ಸ್ಮೃತಿಗಿಂತ ಮೊದಲು, 2022 ರಲ್ಲಿ ಸೂರ್ಯಕುಮಾರ್ ಯಾದವ್ 117 ರನ್‌ಗಳ ಇನ್ನಿಂಗ್ಸ್ ಆಡಿ ಈ ಸಾಧನೆ ಮಾಡಿದ್ದರು.

ಮಂಧಾನಾ ತಮ್ಮ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ, ಅವರು ಟಿ20 ಅಂತರರಾಷ್ಟ್ರೀಯ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಅಂದರೆ 18 ಬೌಂಡರಿಗಳನ್ನು ಬಾರಿಸಿದ ಮೊದಲ ಭಾರತೀಯ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಈ ಹಿಂದೆ ತಮ್ಮ ಶತಕದ ಇನ್ನಿಂಗ್ಸ್‌ನಲ್ಲಿ 15 ಬೌಂಡರಿಗಳನ್ನು ಬಾರಿಸಿದ್ದ ಹರ್ಮನ್‌ಪ್ರೀತ್ ಕೌರ್ ಅವರ ದಾಖಲೆಯನ್ನು ಮುರಿದಿದ್ದಾರೆ.
Published On - 10:50 pm, Sat, 28 June 25