Ashes 2023: ಲಂಡನ್ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಇದುವರೆಗೆ ಇಂಗ್ಲೆಂಡ್ನ ಯಾವುದೇ ಬೌಲರ್ ನಿರ್ಮಿಸದ ದಾಖಲೆ ಎಂಬುದು ವಿಶೇಷ.
ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸ್ಟುವರ್ಟ್ ಬ್ರಾಡ್ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಎರಡು ವಿಕೆಟ್ಗಳೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಬ್ರಾಡ್ ತಮ್ಮದಾಗಿಸಿಕೊಂಡಿದ್ದಾರೆ.
ಆಸೀಸ್ ವಿರುದ್ಧ ಇದುವರೆಗೆ 73 ಇನಿಂಗ್ಸ್ ಆಡಿರುವ ಸ್ಟುವರ್ಟ್ ಬ್ರಾಡ್ 151 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಒಂದೇ ತಂಡದ ವಿರುದ್ಧ ಟೆಸ್ಟ್ನಲ್ಲಿ 150 ಕ್ಕೂ ಅಧಿಕ ವಿಕೆಟ್ ಪಡೆದ ವಿಶ್ವದ 5ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್. ಇಂಗ್ಲೆಂಡ್ ವಿರುದ್ಧ 72 ಇನಿಂಗ್ಸ್ ಆಡಿರುವ ವಾರ್ನ್ ಒಟ್ಟು 195 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇದೀಗ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 150 ಕ್ಕೂ ಅಧಿಕ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಹಾಗೂ ಟೆಸ್ಟ್ನಲ್ಲಿ ಒಂದೇ ತಂಡದ ವಿರುದ್ಧದ ಅತ್ಯಧಿಕ ವಿಕೆಟ್ ಕಬಳಿಸಿದ ಇಂಗ್ಲೆಂಡ್ನ ಮೊದಲ ಬೌಲರ್ ಎಂಬ ದಾಖಲೆಗಳನ್ನು ಸ್ಟುವರ್ಟ್ ಬ್ರಾಡ್ ತಮ್ಮದಾಗಿಸಿಕೊಂಡಿರುವುದು ವಿಶೇಷ.
ಇತ್ತೀಚೆಗಷ್ಟೇ ಸ್ಟುವರ್ಟ್ ಬ್ರಾಡ್ ಟೆಸ್ಟ್ ಕ್ರಿಕೆಟ್ನಲ್ಲಿ 600 ವಿಕೆಟ್ಗಳ ಸಾಧನೆ ಮಾಡಿದ್ದರು. 308 ಇನಿಂಗ್ಸ್ಗಳಿಂದ 602 ವಿಕೆಟ್ ಕಬಳಿಸಿರುವ ಬ್ರಾಡ್ ಟೆಸ್ಟ್ ಕ್ರಿಕೆಟ್ನಲ್ಲಿ ಆರು ನೂರಕ್ಕೂ ಹೆಚ್ಚು ವಿಕೆಟ್ ಪಡೆದ 2ನೇ ವೇಗಿ ಎನಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
Published On - 8:44 pm, Sat, 29 July 23