ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್
Suryakumar Yadav Records: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಟೀಮ್ ಇಂಢಿಯಾ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ವಿರಾಟ್ ಕೊಹ್ಲಿಯ ದಾಖಲೆ ಮುರಿದು ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Updated on:Feb 08, 2026 | 8:30 AM

ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಕ್ರಿಕೆಟ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (virat kohli) ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ತಂಡದ ನಾಯಕ ಮೊನಾಂಕ್ ಪಟೇಲ್ ಭಾರತ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಾಯಕ ಸೂರ್ಯಕುಮಾರ್ ಯಾದವ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶೀಸಿದ್ದರು.

49 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 4 ಸಿಕ್ಸರ್ ಹಾಗೂ 10 ಫೋರ್ಗಳೊಂದಿಗೆ ಅಜೇಯ 84 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ತಂಡವು 20 ಓವರ್ಗಳಲ್ಲಿ 161 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಯುಎಸ್ಎ ತಂಡವು 20 ಓವರ್ಗಳಲ್ಲಿ 132 ರನ್ಗಳಿಸಿ 29 ರನ್ಗಳಿಂದ ಸೋಲೊಪ್ಪಿಕೊಂಡಿತು.

ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಸೂರ್ಯಕುಮಾರ್ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಭಾರತೀಯ ಎನಿಸಿಕೊಂಡಿದ್ದರು.

ಇದೀಗ ವಿರಾಟ್ ಕೊಹ್ಲಿಯ ಈ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 105 ಟಿ20 ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ ಒಟ್ಟು 17 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
Published On - 8:25 am, Sun, 8 February 26
