
2026 ರ ಟಿ20 ವಿಶ್ವಕಪ್‌ನಲ್ಲಿ ಆತಿಥೇಯ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ವಾಸ್ತವವಾಗಿ 2024 ರ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ನಾಯಕತ್ವವಹಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ತಮ್ಮ ನಾಯಕತ್ವದಲ್ಲಿ ತಂಡವನ್ನು ಸತತ ಗೆಲುವಿನತ್ತ ಕೊಂಡೊಯ್ದಿದ್ದಾರೆ.

ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ.

ಪಾಕಿಸ್ತಾನ ವಿರುದ್ಧ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಸೂರ್ಯಕುಮಾರ್ ಯಾದವ್ ನಾಯಕನಾಗಿ 37ನೇ ಗೆಲುವು ದಾಖಲಿಸಿದರು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ವಾಸ್ತವವಾಗಿ ಸೂರ್ಯಕುಮಾರ್ ಯಾದವ್ ತಮ್ಮ ಮೊದಲ 46 ಟಿ20ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ ಇದುವರೆಗೆ 46 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ ತಂಡವನ್ನು 37 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ. ಉಳಿದಂತೆ ಏಳರಲ್ಲಿ ಸೋಲು ಮತ್ತು ಎರಡು ಪಂದ್ಯಗಳು ಡ್ರಾಗೊಂಡಿವೆ.

ಈ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಮೊದಲ 46 ಪಂದ್ಯಗಳಲ್ಲಿ 36 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರೆ, ಹತ್ತು ಪಂದ್ಯಗಳಲ್ಲಿ ಸೋಲುಕಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ 46 ಪಂದ್ಯಗಳಲ್ಲಿ 29 ಪಂದ್ಯಗಳಲ್ಲಿ ಗೆಲುವು ಮತ್ತು 15 ಪಂದ್ಯಗಳಲ್ಲಿ ಸೋಲು ಕಂಡಿದ್ದರು.