ರಾಜ್ಕೋಟ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಭರ್ಜರಿ ಶತಕ ಸಿಡಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯ 45 ಎಸೆತಗಳಲ್ಲಿ ಶತಕ ಪೂರೈಸಿದರು.
ಇದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 3 ಸ್ಪೋಟಕ ಶತಕ ಸಿಡಿಸಿದ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಅಂದರೆ 50 ಕ್ಕಿಂತ ಕಡಿಮೆ ಬಾಲ್ನಲ್ಲಿ ಸೂರ್ಯ ಮೂರು ಶತಕ ಬಾರಿಸಿದ್ದಾರೆ.
ಈ ಹಿಂದೆ ಇಂಗ್ಲೆಂಡ್ ವಿರುದ್ಧ 48 ಎಸೆತಗಳಲ್ಲಿ ಹಾಗೂ ನ್ಯೂಜಿಲೆಂಡ್ ವಿರುದ್ಧ 49 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಮೂರು ಶತಕ ಬಾರಿಸಿದ ಏಕೈಕ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಇದಲ್ಲದೆ ಭಾರತ ತಂಡದ ಪರ 3 ಟಿ20 ಶತಕ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಒಟ್ಟು 4 ಟಿ20 ಶತಕ ಬಾರಿಸಿದ್ದಾರೆ. ಇದೀಗ 3 ಸೆಂಚುರಿ ಸಿಡಿಸುವ ಮೂಲಕ ಸೂರ್ಯ 2ನೇ ಸ್ಥಾನಕ್ಕೇರಿದ್ದಾರೆ.
ಇನ್ನು ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್ಮ್ಯಾನ್ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು.
ಇದೀಗ ಶ್ರೀಲಂಕಾ ವಿರುದ್ಧವೇ 45 ಎಸೆತಗಳಲ್ಲಿ ಶತಕ ಪೂರೈಸಿರುವ ಸೂರ್ಯಕುಮಾರ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಸೂರ್ಯ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್ನೊಂದಿಗೆ ಅಜೇಯ 112 ರನ್ ಚಚ್ಚಿದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.
Published On - 10:17 pm, Sat, 7 January 23