WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಹೊರಬಿದ್ದ ಟೀಮ್ ಇಂಡಿಯಾ
WTC Final 2025: ಭಾರತ ತಂಡವು ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಿದೆ. 2019-21 ರ ಸರಣಿಯಲ್ಲಿ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಮುಗ್ಗರಿಸಿತ್ತು. ಇನ್ನು 2021-23 ರ ಸರಣಿಯಲ್ಲಿ ಮತ್ತೆ ಫೈನಲ್ ಆಡಿದ್ದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತು. ಇದೀಗ ಮೂರನೇ ಭಾರೀ ಫೈನಲ್ಗೇರುವ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ನಿರಾಸೆ ಅನುಭವಿಸಿದೆ.
Updated on:Jan 05, 2025 | 9:53 AM

ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರುವ ಟೀಮ್ ಇಂಡಿಯಾದ ಕನಸು ಕಮರಿದೆ. ಅದು ಕೂಡ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯನ್ನು 3-1 ಅಂತರದಿಂದ ಸೋಲುವ ಮೂಲಕ. ಸಿಡ್ನಿಯಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆದ್ದಿದ್ದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿ ಉಳಿದುಕೊಳ್ಳುತ್ತಿತ್ತು.

ಆದರೆ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 6 ವಿಕೆಟ್ಗಳಿಂದ ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡುವುದನ್ನು ಖಚಿತಪಡಿಸಿಕೊಂಡಿದೆ. ಇತ್ತ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಉಳಿದು ಕೊಂಡಿದೆ.

ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಭಾರತ ತಂಡವು 19 ಪಂದ್ಯಗಳನ್ನಾಡಿತ್ತು. ಈ ವೇಳೆ 8 ಜಯ ಹಾಗೂ 2 ಡ್ರಾಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ 6 ಪಂದ್ಯಗಳಲ್ಲಿ ಸೋಲುವ ಮೂಲಕ ಇದೀಗ ಫೈನಲ್ ರೇಸ್ನಿಂದ ಹೊರಬಿದ್ದಿದೆ.

ಅಲ್ಲದೆ 19 ಪಂದ್ಯಗಳಲ್ಲಿ 9 ಜಯ, 3 ಡ್ರಾ ಹಾಗೂ 8 ಸೋಲುಗಳೊಂದಿಗೆ 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯನ್ನು ಅಂತ್ಯಗೊಳಿಸಿದೆ. ಈ ಮೂಲಕ ಸತತ ಮೂರನೇ ಬಾರಿ ಫೈನಲ್ಗೇರುವ ಅವಕಾಶವನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡದ ಫೈನಲ್ ಆಡುವುದು ಖಚಿತವಾಗಿದೆ. ಇದೀಗ ಟೀಮ್ ಇಂಡಿಯಾ ಫೈನಲ್ ರೇಸ್ನಿಂದ ಹೊರಬಿದ್ದಿದ್ದರಿಂದ ಆಸ್ಟ್ರೇಲಿಯಾ ಕೂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡುವುದು ಕನ್ಫರ್ಮ್ ಆಗಿದೆ. ಹೀಗಾಗಿ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಮುಖಾಮುಖಿಯಾಗಲಿದೆ.
Published On - 9:52 am, Sun, 5 January 25

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



