17 ರನ್ಗಳಿಂದ ಟೀಮ್ ಇಂಡಿಯಾ ಕೈ ತಪ್ಪಿದ ವಿಶ್ವ ದಾಖಲೆ
India vs Bangladesh, 3rd T20I: ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 297 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 20 ಓವರ್ಗಳಲ್ಲಿ 164 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 133 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
1 / 7
ಬಾಂಗ್ಲಾದೇಶ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್ಗಳು ರನ್ ಸುರಿಮಳೆಗೈದಿದ್ದಾರೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.
2 / 7
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 4 ರನ್ಗಳಿಸಿ ಔಟಾಗಿದ್ದರು. ಆದರೆ ಈ ಆರಂಭಿಕ ಆಘಾತದಿಂದ ಟೀಮ್ ಇಂಡಿಯಾ ಕೆಲವೇ ಕ್ಷಣಗಳಲ್ಲಿ ಹೊರಬಂದಿದ್ದರು. ಏಕೆಂದರೆ 2ನೇ ವಿಕೆಟ್ಗೆ ಜೊತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
3 / 7
ಬಾಂಗ್ಲಾ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಈ ಜೋಡಿಯು 2ನೇ ವಿಕೆಟ್ಗೆ 173 ರನ್ಗಳ ಜೊತೆಯಾಟವಾಡಿದರು. ಇದರ ನಡುವೆ ಸಂಜು ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 111 ರನ್ ಬಾರಿಸಿ ಔಟಾದರು.
4 / 7
ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 75 ರನ್ ಬಾರಿಸಿದರು. ಆ ಬಳಿಕ ಬಂದ ರಿಯಾನ್ ಪರಾಗ್ 34 ರನ್ ಕಲೆಹಾಕಿದರೆ, ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಚಚ್ಚಿದರು.
5 / 7
ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿತು. ಇದು ಟಿ20 ಕ್ರಿಕೆಟ್ನಲ್ಲಿ ಭಾರತ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ ಎಂಬುದು ವಿಶೇಷ. ಇದಾಗ್ಯೂ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾದ ಕೈ ತಪ್ಪಿದೆ.
6 / 7
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನೇಪಾಳ ತಂಡದ ಹೆಸರಿನಲ್ಲಿದೆ. 2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿ ಈ ವಿಶ್ವ ದಾಖಲೆ ನಿರ್ಮಿಸಿದೆ.
7 / 7
ಈ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದ ಟೀಮ್ ಇಂಡಿಯಾ ಅಂತಿಮ ಓವರ್ಗಳ ವೇಳೆ ವಿಕೆಟ್ ಕೈಚೆಲ್ಲುವ ಮೂಲಕ ತಪ್ಪು ಮಾಡಿತು. ಪರಿಣಾಮ ಕೇವಲ 17 ರನ್ಗಳ ಅಂತರದಿಂದ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ವಿಶ್ವ ದಾಖಲೆ ಬರೆಯುವ ಅವಕಾಶವನ್ನು ಟೀಮ್ ಇಂಡಿಯಾದ ಕೈ ಚೆಲ್ಲಿಕೊಂಡಿತು.