
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು 161 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ಯುಎಸ್ಎ 132 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ಪಂದ್ಯವನ್ನು 29 ರನ್ಗಳಿಂದ ಗೆದ್ದುಕೊಂಡಿದೆ.

ಈ ಗೆಲುವಿನ ಹೊರತಾಗಿಯೂ ಈ ಪಂದ್ಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿದಿರಲಿಲ್ಲ. ಜ್ವರದಿಂದ ಬಳಲುತ್ತಿರುವ ಕಾರಣ ಬುಮ್ರಾ ಅವರು ಯುಎಸ್ಎ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು.

ಅತ್ತ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಕೂಡ ಅನಾರೋಗ್ಯದ ಸಮಸ್ಯೆಗೀಡಾಗಿದ್ದಾರೆ. ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. ಆದರೆ ಅವರು ಫೀಲ್ಡಿಂಗ್ಗೆ ಆಗಮಿಸಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಅನಾರೋಗ್ಯಕೀಡಾಗಿರುವುದು.

ಅಂದರೆ ಮೊದಲ ಪಂದ್ಯದ ವೇಳೆಯೇ ಜಸ್ಪ್ರೀತ್ ಬುಮ್ರಾ ಹಾಗೂ ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅಂದರೆ ಫೆಬ್ರವರಿ 12 ರೊಳಗೆ ಇಬ್ಬರು ಸಂಪೂರ್ಣ ಗುಣಮುಖರಾದರೆ ಮಾತ್ರ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಮೊಹಮ್ಮದ್ ಸಿರಾಜ್ ಹಾಗೂ ಸಂಜು ಸ್ಯಾಮ್ಸನ್ಗೆ ಅವಕಾಶ ದೊರೆಯಲಿದೆ.

ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.