
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇದೀಗ ಈ ದಾಖಲೆಯನ್ನು ಮುರಿಯುವತ್ತ ಇಂಗ್ಲೆಂಡ್ನ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ (Joe Root) ಹೆಜ್ಜೆಯನ್ನಿಟ್ಟಿದ್ದಾರೆ.

ಸಿಡ್ನಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಕೊನೆಯ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಜೋ ರೂಟ್ 72* ರನ್ಗಳ ಭರ್ಜರಿ ಇನಿಂಗ್ಸ್ ಆಡಿದ್ದಾರೆ. ಈ ಅರ್ಧಶತಕದೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ರೂಟ್ ದ್ವಿತೀಯ ಸ್ಥಾನಕ್ಕೇರಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸಚಿನ್ ತೆಂಡೂಲ್ಕರ್. ಟೀಮ್ ಇಂಡಿಯಾ ಪರ 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ 329 ಇನಿಂಗ್ಸ್ಗಳಲ್ಲಿ ಒಟ್ಟು 68 ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಜೋ ರೂಟ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯ ಸನಿಹಕ್ಕೆ ತಲುಪಿದ್ದಾರೆ. ಇಂಗ್ಲೆಂಡ್ ಪರ ಈವರೆಗೆ 163 ಪಂದ್ಯಗಳಲ್ಲಿ 297 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 67 ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಜೋ ರೂಟ್ ಇನ್ನೊಂದು ಅರ್ಧಶತಕ ಬಾರಿಸಿದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಹಾಫ್ ಸೆಂಚುರಿ ಸಿಡಿಸಿದ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಇನ್ನು ಎರಡು ಹಾಫ್ ಸೆಂಚುರಿಗಳು ಮೂಡಿಬಂದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಜೋ ರೂಟ್ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗುವುದನ್ನು ನಿರೀಕ್ಷಿಸಬಹುದು.