
ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ವಿಶ್ವಕಪ್ ಟೂರ್ನಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದು ಸಹ ಗಾಯದ ಕಾರಣ..!

ಟಿ20 ವಿಶ್ವಕಪ್ ಟೂರ್ನಿಗೆ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿರುವ ಎಡಗೈ ದಾಂಡಿಗ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನ ಸಮಸ್ಯೆಗೆ ಸರ್ಜರಿ ಮಾಡಿಸಿಕೊಂಡಿದ್ದಾರೆ.

ಹೀಗಾಗಿ ತಿಲಕ್ ವರ್ಮಾ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಅತ್ತ ನ್ಯೂಝಿಲೆಂಡ್ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಟಿ20 ವಿಶ್ವಕಪ್ಗೆ ಸಜ್ಜಾಗಲಿದೆ. ಹೀಗಾಗಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಿಲಕ್ ವರ್ಮಾ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ಮತ್ತೊಂದೆಡೆ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಪೆಕ್ಕೆಲುಬಿಗೆ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಕಿವೀಸ್ ವಿರುದ್ಧದ 2 ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅಲ್ಲದೆ ಮುಂಬರುವ ಟಿ20 ಸರಣಿಯಲ್ಲೂ ಸುಂದರ್ ಕಾಣಿಸಿಕೊಳ್ಳುವುದು ಡೌಟ್.

ಅಂದರೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಹಾಗೂ ವಾಷಿಂಗ್ಟರ್ ಸುಂದರ್ ಕಣಕ್ಕಿಳಿಯುವುದು ಅನುಮಾನ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಬೇಕಿರುವುದರಿಂದ ಇಬ್ಬರ ಬದಲಿಗೆ ಶೀಘ್ರದಲ್ಲೇ ಬದಲಿ ಆಟಗಾರರನ್ನು ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ನಲ್ಲಿ ತಿಲಕ್ ವರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳದಿದ್ದರೂ ಅಚ್ಚರಿಪಡಬೇಕಿಲ್ಲ.

ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್.