11 ಭರ್ಜರಿ ಸಿಕ್ಸ್, 6 ಫೋರ್: ಶರವೇಗದ ಶತಕ ಸಿಡಿಸಿ ಭರ್ಜರಿ ದಾಖಲೆ ಬರೆದ ಟಿಮ್ ಡೇವಿಡ್
West Indies vs Australia: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ಗಳಲ್ಲಿ 214 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು 16.1 ಓವರ್ಗಳಲ್ಲಿ 215 ರನ್ ಬಾರಿಸಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: Jul 26, 2025 | 8:32 AM

ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ (Tim David) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಶರವೇಗದ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ಟಿಮ್ ಡೇವಿಡ್ ಪಾಲಾಗಿದೆ.

ಸೇಂಟ್ ಕಿಟ್ಸ್ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್ ಪರ ಶಾಯ್ ಹೋಪ್ 57 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು.

215 ರನ್ಗಳ ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಉತ್ತಮ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ ಕೇವಲ 22 ರನ್ ಗಳಿಸಿ ಔಟಾದರೆ, ಗ್ಲೆನ್ ಮ್ಯಾಕ್ಸ್ವೆಲ್ 20 ರನ್ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು. ಇನ್ನು ಜೋಶ್ ಇಂಗ್ಲಿಸ್ ಕಲೆಹಾಕಿದ್ದು ಕೇವಲ 15 ರನ್ ಮಾತ್ರ. ಆ ಬಳಿಕ ಬಂದ ಕ್ಯಾಮರೋನ್ ಗ್ರೀನ್ 11 ರನ್ಗಳಿಸಿ ಹಿಂತಿರುಗಿದರು.

ಈ ಹಂತದಲ್ಲಿ ಜೊತೆಗೂಡಿದ ಟಿಮ್ ಡೇವಿಡ್ ಹಾಗೂ ಮಿಚೆಲ್ ಓವನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಏಕಾಂಗಿಯಾಗಿ ಇನಿಂಗ್ಸ್ ಕಟ್ಟಿದ ಟಿಮ್ ಡೇವಿಡ್ ವಿಂಡೀಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಯಾಯಿತು. ಈ ಮೂಲಕ ಕೇವಲ 37 ಎಸೆತಗಳಲ್ಲಿ ಶತಕ ಪೂರೈಸಿ ಹೊಸ ದಾಖಲೆ ಬರೆದರು.

37 ಎಸೆತಗಳನ್ನು ಎದುರಿಸಿದ ಟಿಮ್ ಡೇವಿಡ್ 11 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ದಾಖಲೆ ಟಿಮ್ ಪಾಲಾಯಿತು. ಇದಕ್ಕೂ ಮುನ್ನ ಈ ರೆಕಾರ್ಡ್ ಜೋಶ್ ಇಂಗ್ಲಿಸ್ ಅವರ ಹೆಸರಿನಲ್ಲಿತ್ತು.

2024 ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಕೇವಲ 43 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಟಿಮ್ ಡೇವಿಡ್ ಮುರಿದಿದ್ದಾರೆ.

ಕೇವಲ 37 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಟಿಮ್ ಡೇವಿಡ್ ಆಸ್ಟ್ರೇಲಿಯಾ ಪರ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಟೆಸ್ಟ್ ಆಡುವ ದೇಶಗಳ ಪರ ಅತೀ ವೇಗದ ಸೆಂಚುರಿ ಸಿಡಿಸಿದ ಮೂರನೇ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.
