167.3 ರಭಸದ ಬ್ಯಾಟಿಂಗ್: ಟಿಮ್ ಡೇವಿಡ್ ವಿಶ್ವ ದಾಖಲೆ
Australia vs South Africa: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಟಿಮ್ ಡೇವಿಡ್ (83) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 178 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 161 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ತಂಡ 17 ರನ್ಗಳ ಜಯ ಸಾಧಿಸಿದೆ.
Updated on: Aug 11, 2025 | 7:31 AM

ಟಿ20 ಕ್ರಿಕೆಟ್ನಲ್ಲಿ ಟಿಮ್ ಡೇವಿಡ್ (Tim David) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಸ್ಫೋಟಕ ಬ್ಯಾಟಿಂಗ್ ನೊಂದಿಗೆ. ಅಂದರೆ ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್ ಗಳ ಪಟ್ಟಿಯಲ್ಲಿ ಇದೀಗ ಆಸ್ಟ್ರೇಲಿಯಾದ ಹೊಡಿಬಡಿ ದಾಂಡಿಗ ಅಗ್ರಸ್ಥಾನಕ್ಕೇರಿದ್ದಾರೆ.

ಡಾರ್ವಿನ್ನ ಮರ್ರಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೇವಿಡ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಅಂತಿಮವಾಗಿ 52 ಎಸೆತಗಳನ್ನು ಎದುರಿಸಿದ ಟಿಮ್ ಡೇವಿಡ್ 8 ಭರ್ಜರಿ ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 83 ರನ್ ಗಳಿಸಿದರು. ಈ ಸ್ಫೋಟಕ ಬ್ಯಾಟಿಂಗ್ ನೊಂದಿಗೆ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 1000 ರನ್ ಗಳಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಟೀಮ್ ಇಂಡಿಯಾದ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್ ನಲ್ಲಿ ಕನಿಷ್ಠ ಸಾವಿರ ರನ್ ಗಳಿಸಿದ ಬ್ಯಾಟ್ಸ್‌ಮನ್ ಗಳ ಪಟ್ಟಿಯಲ್ಲಿ 167ರ ಸ್ಟ್ರೈಕ್ ರೇಟ್ ನೊಂದಿಗೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಅಲಂಕರಿಸಿದ್ದರು.

ಇದೀಗ ಸೌತ್ ಆಫ್ರಿಕಾ ವಿರುದ್ಧದ ಆರ್ಭಟದೊಂದಿಗೆ ಟಿಮ್ ಡೇವಿಡ್ ಮೊದಲ ಸ್ಥಾನಕ್ಕೇರಿದ್ದಾರೆ. ಅದು ಕೂಡ 167.3 ಸ್ಟ್ರೈಕ್ ರೇಟ್ ಮೂಲಕ. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 1000 ರನ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆಯನ್ನು ಟಿಮ್ ಡೇವಿಡ್ ಪಾಲಾಗಿದೆ.
