
ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಟ್ರಾವಿಸ್ ಹೆಡ್ (Travis Head) ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ (WTC) ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಎಂಬುದು ವಿಶೇಷ.

ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 59 ರನ್ ಬಾರಿಸಿದ್ದ ಹೆಡ್, ದ್ವಿತೀಯ ಇನಿಂಗ್ಸ್ನಲ್ಲಿ 61 ರನ್ ಕಲೆಹಾಕಿದ್ದರು.

ಈ ಎರಡು ಅರ್ಧಶತಕಗಳೊಂದಿಗೆ ಟ್ರಾವಿಸ್ ಹೆಡ್ ಆಸ್ಟ್ರೇಲಿಯಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಗೆಲುವಿನೊಂದಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಹೆಡ್ ಪಾಲಾಯಿತು. ವಿಶೇಷ ಎಂದರೆ ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಟ್ರಾವಿಸ್ ಹೆಡ್ ಅವರ 10ನೇ ಪಂದ್ಯ ಶ್ರೇಷ್ಠ ಪ್ರಶಸ್ತಿ.

ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಅತ್ಯಧಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು. ಹೆಡ್ ಅವರನ್ನು ಹೊರತುಪಡಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಯಾವುದೇ ಬ್ಯಾಟರ್ ಎರಡಂಕಿಯಷ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿಲ್ಲ ಎಂಬುದು ವಿಶೇಷ.

ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಬೆನ್ ಸ್ಟೋಕ್ಸ್. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಈವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ 5 ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಆಡಿದ 50 ಪಂದ್ಯಗಳಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಟ್ರಾವಿಸ್ ಹೆಡ್ ಇತಿಹಾಸ ನಿರ್ಮಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್ನಲ್ಲಿ 180 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ 190 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 310 ರನ್ ಕಲೆಹಾಕಿದೆ. ಅದರಂತೆ 301 ರನ್ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ಕೇವಲ 141 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸೀಸ್ ಪಡೆ 159 ರನ್ಗಳ ಭರ್ಜರಿ ಜಯ ಸಾಧಿಸಿದೆ.
Published On - 3:03 pm, Sat, 28 June 25