
ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟರ್ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi). ಅಂದರೆ ಮೊದಲ ಸುತ್ತಿನಲ್ಲಿ ಒಟ್ಟು 89 ಬ್ಯಾಟರ್ಗಳು ಕಣಕ್ಕಿಳಿದಿದ್ದಾರೆ. ಇವರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ವೈಭವ್ 3 ವಿಭಾಗದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಲೀಗ್ ಹಂತದ ಮೂರು ಪಂದ್ಯಗಳಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ಬ್ಯಾಟರ್ಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಮೊದಲ ಸ್ಥಾನದಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ವೈಭವ್ ಕಳೆದ ಮೂರು ಮ್ಯಾಚ್ಗಳಲ್ಲಿ 242.16 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಅತ್ಯಧಿಕ ಸ್ಟ್ರೈಕ್ ಹೊಂದಿರುವ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಕಳೆದ ಮೂರು ಮ್ಯಾಚ್ಗಳಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ವೈಭವ್ ಸೂರ್ಯವಂಶಿ ಅಗ್ರಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಈವರೆಗೆ 18 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ 16 ಸಿಕ್ಸ್ ಬಾರಿಸಿರುವ ಮಾಝ್ ಸದಾಖತ್ ಇದ್ದಾರೆ.

ಹಾಗೆಯೇ ರೈಸಿಂಗ್ ಸೂಪರ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯ ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ವೈಭವ್ ಸೂರ್ಯವಂಶಿ ಮುಂಚೂಣಿಯಲ್ಲಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 42 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 144 ರನ್ ಬಾರಿಸಿದ್ದಾರೆ. ಈ ಮೂಲಕ ಪ್ರಸ್ತುತ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಾಗ್ಯೂ ಅತ್ಯಧಿಕ ರನ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಮಾಝ್ ಸದಾಖತ್ (212) ಮೊದಲ ಸ್ತಾನದಲ್ಲಿದ್ದು, ಮೂರು ಪಂದ್ಯಗಳಲ್ಲಿ 67 ರ ಸರಾಸರಿಯಲ್ಲಿ 201 ರನ್ ಗಳಿಸಿರುವ ವೈಭವ್ 2ನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಈ ವಿಭಾಗದಲ್ಲೂ ವೈಭವ್ ಸೂರ್ಯವಂಶಿಗೆ ಅಗ್ರಸ್ಥಾನಕ್ಕೇರಬಹುದು.
Published On - 5:56 pm, Thu, 20 November 25