
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ.

ಅಂದರೆ ಏಕದಿನ ಸರಣಿ ಮುಗಿಸಿರುವ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಯಲ್ಲಿ ಹಿಟ್ಮ್ಯಾನ್ ಮತ್ತು ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಇದಾದ ಬಳಿಕ ಭಾರತ ತಂಡವು ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ.

ಅತ್ತ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಿರುವ ಕಾರಣ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಚುಟುಕು ವಿಶ್ವಕಪ್ನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರು ಐಪಿಎಲ್ ಆಡಲಿದ್ದಾರೆ.

ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದವರೆಗೆ ಟೀಮ್ ಇಂಡಿಯಾ ಯಾವುದೇ ಏಕದಿನ ಸರಣಿ ಆಡುವುದಿಲ್ಲ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ ಜೆರ್ಸಿಯಲ್ಲಿ ನೋಡಲು ಮುಂದಿನ ಜೂನ್ವರೆಗೆ ಕಾಯಲೇಬೇಕು.

ಜೂನ್ ತಿಂಗಳಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಕಿಂಗ್ ಕೊಹ್ಲಿ ಮತ್ತು ಹಿಟ್ಮ್ಯಾನ್ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲಿಯವರೆಗೆ ಇಬ್ಬರು ದಿಗ್ಗಜರಿಗೆ ವಿಶ್ರಾಂತಿ.