Updated on: Mar 23, 2023 | 9:53 PM
ಬುಧವಾರ (ಮಾ.22) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಭಾರ-ಆಸ್ಟ್ರೇಲಿಯಾ ನಡುವಣ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಕೊಹ್ಲಿ 54 ರನ್ ಬಾರಿಸಿ ಮಿಂಚಿದ್ದರು.
ಈ 54 ರನ್ಗಳೊಂದಿಗೆ ತವರಿನಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಮೇಲೇರಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ವಿಶೇಷ.
ಹೌದು, ರಿಕಿ ಪಾಂಟಿಂಗ್ ಆಸ್ಟ್ರೇಲಿಯಾದಲ್ಲಿ ಆಡಿದ 153 ಏಕದಿನ ಪಂದ್ಯಗಳಲ್ಲಿ 5406 ರನ್ ಗಳಿಸಿ ದಾಖಲೆ ಬರೆದಿದ್ದರು. ಇದೀಗ ಕೇವಲ 110 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮುರಿದಿದ್ದಾರೆ.
ಕಿಂಗ್ ಕೊಹ್ಲಿ ಭಾರತದಲ್ಲಿ ಆಡಿದ 110 ಏಕದಿನ ಪಂದ್ಯಗಳ ಮೂಲಕ ಒಟ್ಟು 5447 ರನ್ಗಳಿಸಿದ್ದಾರೆ. ಈ ಮೂಲಕ ಸ್ವದೇಶದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.
ಈ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಕ್ರಿಕೆಟ್ ದೇವರು ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 6,976 ರನ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ನಿರ್ಮಿಸಿದ್ದರು.
ಇದೀಗ 5447 ರನ್ ಬಾರಿಸಿರುವ ವಿರಾಟ್ ಕೊಹ್ಲಿಗೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು 1530 ರನ್ಗಳ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ವರ್ಷಗಳಲ್ಲಿ ಮಾಸ್ಟರ್ ಬ್ಲಾಸ್ಟರ್ ಹೆಸರಿನಲ್ಲಿರುವ ಈ ದಾಖಲೆಯನ್ನು ಕಿಂಗ್ ಕೊಹ್ಲಿ ಮುರಿದರೂ ಅಚ್ಚರಿಪಡಬೇಕಿಲ್ಲ.